ಶಿವಮೊಗ್ಗ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಮೌಲಾನ ಅಬ್ದುಲ್ ಕಲಾಂ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ವ್ಯವಸ್ಥೆ ಕಲ್ಪಿಸುವಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸಲು ಶೀಘ್ರವೇ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಸಕ್ತ ಸಾಲಿನ ಆಗಸ್ಟ್ ಮಾಸಾಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೌಲಾನ ಶಾಲೆಗಳಲ್ಲಿ ಬಿಸಿಯೂಟ ಪೂರೈಕೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆ ಕರೆದು ಸಮಾಲೋಚಿಸಲಾಗುವುದು ಎಂದರು.
ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 2500ಕ್ಕೂ ಹೆಚ್ಚಿನ ಕುಟುಂಬಗಳ ಸದಸ್ಯರು ಬಿ.ಪಿ.ಎಲ್.ಕಾರ್ಡನ್ನು ಪಡೆದುಕೊಂಡಿರುವುದು ಗಮನಕ್ಕೆ ಬಂದಿದೆ. ಅಲ್ಲದೇ ಸುಮಾರು 2400 ಕುಟುಂಬಗಳ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಅಲ್ಲದೇ ಕೆಲವು ಸರ್ಕಾರಿ ನೌಕರರು ಎ.ಪಿ.ಎಲ್. ಕಾರ್ಡನ್ನು ಪಡೆದುಕೊಂಡಿರುವುದು ಗಮನಕ್ಕೆ ಬಂದಿದ್ದು, ಸಾಕಷ್ಟು ಕಾರ್ಡುಗಳನ್ನು ರದ್ದುಗೊಳಿಸಲಾಗಿದೆ ಎಂದರು.
ಅಲ್ಲದೇ ಇನ್ನಷ್ಟು ಕುಟುಂಬಗಳ ಸದಸ್ಯರು ಹೊಂದಿರುವ ಪಡಿತರ ಚೀಟಿಗಳ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ. ಅವುಗಳ ವರದಿ ಬಂದ ನಂತರ ತಪ್ಪಿತಸ್ಥ ಕುಟುಂಬಗಳ ಪಡಿತರದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೇ ಸರ್ಕಾರಿ ನೌಕರರಾಗಿದ್ದಲ್ಲಿ ಈವರೆಗೆ ಪಡೆದ ಪಡಿತರಕ್ಕೆ ಸಂಬಂಧಿಸಿದಂತೆ ಅದರ ವೆಚ್ಚ ಹಾಗೂ ದಂಡವನ್ನು ನೌಕರರ ವೇತನದಿಂದ ಕಟಾವಣೆ ಮಾಡಿಕೊಳ್ಳಲಾಗುವುದು ಎಂದರು.
ಜಿಲ್ಲೆಯ ಸಾಕಷ್ಟು ಸರ್ಕಾರಿ ಕಚೇರಿಗಳಿಂದ ಸುಮಾರು 300ಕೋಟಿ ರೂ.ಗಳಿಗೂ ಹೆಚ್ಚಿನ ವಿದ್ಯುತ್ ಬಿಲ್ ಸಂದಾಯವಾಗಬೇಕಾಗಿದೆ. ಅವುಗಳನ್ನು ಪಾವತಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಜಿಲ್ಲೆಯ ಶಿಕಾರಿಪುರ ಮತ್ತು ಸೊರಬ ತಾಲೂಕುಗಳ ಆಯ್ದ ಪ್ರದೇಶಗಳಲ್ಲಿ ಅಸಮರ್ಪಕ ವಿದ್ಯುತ್ ಸರಬರಾಜು ಆಗುತ್ತಿದ್ದು, ಕೃಷಿ ಮತ್ತು ಏತ ನೀರಾವರಿ ಯೋಜನೆಗಳಿಗೆ ಅತೀವ ಅಡಚಣೆ ಉಂಟಾಗಿದ್ದು ಸಾರ್ವಜನಿಕ ವಲಯದಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಈ ಸಮಸ್ಯೆಯನ್ನು ಕೂಡಲೇ ಇತ್ಯರ್ಥಗೊಳಿಸುವಂತೆ ಮೆಸ್ಕಾಂನ ಸೂಪರಿಂಟೆಂಡೆಂಟ್ ಜಯದೇವಪ್ಪ ಅವರಿಗೆ ಸೂಚಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸರ್ಕಾರಿ ಕಚೇರಿಗಳು ಹಾಗೂ ವಿದ್ಯುತ್ ಬಿಲ್ ಪಾವತಿ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಕಚೇರಿ ಕರ್ತವ್ಯಕ್ಕೆ ಅಡಚಣೆಯಾಗದಂತೆ ಮೆಸ್ಕಾಂ ಅಧಿಕಾರಿಗಳು ಸಹಕರಿಸಿ. ಬಾಕಿ ಹಣ ಪಾವತಿಸುವಂತೆ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ-ಸಿಬ್ಬಂದಿ ಶಿಸ್ತು ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು. ಕಚೇರಿಗೆ ಬರುವ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಬೇಕು. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ ಸಕಾಲದಲ್ಲಿ ನಿಗದಿತ ಉದ್ದೇಶಕ್ಕೆ ಸದ್ಬಳಕೆ ಆಗಬೇಕು. ಇದರಲ್ಲಿ ಯಾವುದೇ ವ್ಯತ್ಯಯವಾಗದಂತೆ ಹಾಗೂ ಕೈಗೊಳ್ಳುವ ಕಾಮಗಾರಿಗಳು ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳಲು ಸೂಚಿಸಿದರು. ಇಲಾಖಾ ಅಧಿಕಾರಿಗಳು ತಮ್ಮ ಅಧೀನದಲ್ಲಿನ ಕಾರ್ಯಕ್ಷೇತ್ರಗಳಿಗೆ ಕಾಲಕಾಲಕ್ಕೆ ಖುದ್ದುಭೇಟಿ ನೀಡಿ ಉಸ್ತುವಾರಿ ನೋಡಿಕೊಳ್ಳಬೇಕು ಎಂದರು.
ಸರ್ಕಾರದಿಂದ ಅನುಷ್ಠಾನದಲ್ಲಿರುವ ಶಕ್ತಿ ಯೋಜನೆಯಡಿ ಅನುಷ್ಠಾನದಲ್ಲಿರುವ 365 ಮಾರ್ಗಗಳಲ್ಲಿ 121 ಕೋಟಿ ಮಂದಿ ಪ್ರಯಾಣ ಬೆಳೆಸಿದ್ದಾರೆ. ಅದರಲ್ಲಿ ಶೇ.60ರಷ್ಟು ಮಹಿಳೆಯರೇ ಇರುವುದು ವಿಶೇಷವಾಗಿದೆ. ಹೊಸದಾದ 215 ಮಾರ್ಗಗಳಿಗೆ ಬೇಡಿಕೆಯೂ ಬಂದಿದ್ದು, 40 ಹೊಸ ಬಸ್ಗಳನ್ನು ರಸ್ತೆಗೆ ಬಿಡಲಾಗಿದೆ ಎಂದರು.
ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಿದ ಸುಮಾರು 5681 ಮಂದಿ ಪೈಕಿ 2836 ಮಂದಿ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಇದ್ದರು.




