ನೀಟ್ ಅಕ್ರಮ ಮೋದಿ ಸರ್ಕಾರದ ಬಹುದೊಡ್ಡ ಹಗರಣ: ಶರಣ್ ಪ್ರಕಾಶ್ ಪಾಟೀಲ್

2 years ago

ರಾಯಚೂರು: ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗೆ ನಡೆದಿರುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ  ಹಗರಣ ಇದಾಗಿದೆ ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಹೊಸ ಹೊಸ ಪ್ರಕರಣಗಳು ದಿನದಿಂದ ದಿನಕ್ಕೆ ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಪ್ರಮಾಣದ  ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ ಎಂದು ಅಚ್ಚರಿ ವ್ಯಕ್ತಪಡಿಸಿದರು.

ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ನಡವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಯಾರನ್ನೋ ರಕ್ಷಣೆ ಮಾಡಲು ಹೊರಟಂತಿದೆ. ಇದರಲ್ಲಿ ಪಕ್ಷ ರಾಜಕಾರಣ ಮರೆಯಬೇಕು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಡಗಿರುವುದರಿಂದ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು. ಆದರೆ ಈ ವಿಷಯದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು  ಕಿಡಿಕಾರಿದರು.

ದೇಶದಾದ್ಯಂತ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ. ನೀಟ್ ಮರು ಪರೀಕ್ಷೆ ನಡೆಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ಕೇಂದ್ರ ಸರ್ಕಾರದ ಕಾಯಿದೆಯಿಂದ ನೀಟ್ ಬಂದಿದೆ. ಹಾಗಾಗಿ ನೀಟ್ ರದ್ದು ಮಾಡಲು ಸುಪ್ರೀಂಕೋರ್ಟ್ ತೀರ್ಪು ಆಗಬೇಕು ಎಂದರು.

ತಮಿಳುನಾಡು ಸರ್ಕಾರ ಅದರ ಭಾವನೆ ಹೇಳಿದೆ. ನಾವು ಕರ್ನಾಟಕದಲ್ಲಿ ಇದೇ ರೀತಿ ಮಾಡಬೇಕಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ. ಸುಪ್ರೀಂಕೋರ್ಟ್ ಸಹ ಕೇಂದ್ರ ಸರ್ಕಾರಕ್ಕೆ ನಿಮ್ಮ ತಪ್ಪು ಇದ್ದರೆ ಒಪ್ಪಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದೆ ಎಂದರು.

Leave a Reply