ಬೆಂಗಳೂರು: ಹೊಸ ವರ್ಷವನ್ನು ಬರಮಾಡಿಕೊಳ್ಳುವ ಸಂಭ್ರಮಾಚರಣೆ ವೇಳೆ ಮದ್ಯದ ಹೊಳೆಯೂ ಹರಿದಿದೆ. ನಿನ್ನೆ ಒಂದೇ ದಿನ ದಾಖಲೆಯ ಮಟ್ಟದಲ್ಲಿ ಮದ್ಯ ಮಾರಾಟವಾಗಿದೆ. ಅಬಕಾರಿ ಇಲಾಖೆಯ ಮಾಹಿತಿಗಳ ಪ್ರಕಾರ ಡಿಸೆಂಬರ್ 31ರಂದು ಬರೋಬ್ಬರಿ, 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ.
ಈ ಮೂಲಕ ಒಂದೇ ದಿನ ಭರ್ಜರಿ ಮದ್ಯ ಮಾರಾಟದ ದಾಖಲೆ ಸೃಷ್ಟಿಯಾಗಿದೆ. ಡಿಸೆಂಬರ್ ತಿಂಗಳಲ್ಲಿ ಭಾರತೀಯ ಮದ್ಯ 3,07,953 ಬಾಕ್ಸ್, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ 2,611 ಕೋಟಿ ಆದಾಯ ಬಂದಿತ್ತು. ಈ ವರ್ಷ ಡಿಸೆಂಬರ್ ತಿಂಗಳಲ್ಲಿ 3 ಸಾವಿರ ಕೋಟಿ ಆದಾಯ ಸಂಗ್ರಹವಾಗಿದೆ.
ಎರಡು ವರ್ಷಕ್ಕೆ ಹೋಲಿಸಿದರೆ ಈ ವರ್ಷದಲ್ಲಿ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ಹರಿದುಬಂದಿದೆ. ನಗರ ಹಾಗೂ ಗ್ರಾಮೀಣ ಭಾಗದ ಮೂಲೆ ಮೂಲೆಯಲ್ಲಿಯೂ ಜನ ಮದ್ಯದ ನಶೆಯ ಮೂಲಕ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಬೆಂಗಳೂರಿನಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು 717 ಪಾನಮತ್ತ ಚಾಲನೆ ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ಜಪ್ತಿ ಮಾಡಿದ್ದಾರೆ.




