ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಇರುವ ವಿಚಾರವನ್ನು ಮಾಧ್ಯಮಗಳು ವರದಿ ಮಾಡುತ್ತಿವೆ. ಕುಮಾರಸ್ವಾಮಿಯಂತಹ ನಾಯಕರಿಗೇ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಅಂದರೆ ಇನ್ನು ಜನಸಾಮಾನ್ಯರ ಪಾಡೇನು? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಪ್ರಶ‍್ನಿಸಿದ್ದಾರೆ.
ಸರ್ಕಾರ ಕೂಡಲೇ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹೆಚ್ಚುವರಿ ಬೆಡ್ಗಳನ್ನು ಮೀಸಲಿರಿಸಿ ಒಟ್ಟಾರೆ ಬೆಡ್ ಸಂಖ್ಯೆಯನ್ನು ಹೆಚ್ಚಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಬೆಡ್ಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿಡಬೇಕು ಎಂಬ ಸರ್ಕಾರದ ಆದೇಶ ಪರಿಣಾಮಕಾರಿಯಾಗಿ ಜಾರಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕೊರೊನಾ ಮೊದಲ ಅಲೆಯ ನಂತರ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡು 2ನೇ ಅಲೆಗೆ ಎಚ್ಚೆತ್ತುಕೊಳ್ಳಬೇಕಿತ್ತು. 2ನೇ ಅಲೆ ತೀವ್ರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದರೂ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದು ಇಷ್ಟೆಲ್ಲಾ ಅನಾಹುತಕ್ಕೆ ಕಾರಣ. ಈ ನಿರ್ಲಕ್ಷ್ಯವನ್ನು ಸರ್ಕಾರ ಈಗಲೂ ಮುಂದುವರಿಸದೇ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದಿದ್ದಾರೆ.




