ಬೆಂಗಳೂರು: ಕಾಂಗ್ರೆಸ್ ಕುರಿತು ಆಧಾರರಹಿತ ಆರೋಪ ಮಾಡುವ ಹಾಗು ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಸೆಳೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಹೇಳಿಕೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿ ಅವರಿಗೆ ತಿರುಗೇಟು ನೀಡಿದ್ದಾರೆ.
ಧೃವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡುವಂತೆ ಒತ್ತಡ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಧೃವನಾರಾಯಣ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಇನ್ನು ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಪಕ್ಷದ ನಿಷ್ಠಾವಂತ ನಾಯಕರಾದ ಧೃವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ನೀಡಿದ್ದೇನೆ. ಧೃವನಾರಾಯಣ ಅವರಂತಹ ಕಾರ್ಯಾಧ್ಯಕ್ಷರನ್ನು ಕಳೆದುಕೊಂಡಿರುವುದು ಇಡೀ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಆಘಾತದಿಂದ ನಾವಿನ್ನೂ ಹೊರಬರಲು ಸಾಧ್ಯವಾಗಿಲ್ಲ. ಸಂಘಟನೆ ಶಕ್ತಿ, ತಾಳ್ಮೆ, ನಿಷ್ಠೆ, ಸೌಮ್ಯ ವ್ಯಕ್ತಿತ್ವಕ್ಕೆ ಮತ್ತೊಂದು ಹೆಸರು ಧೃವನಾರಾಯಣ ಅವರು. ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಕೆಲಸವನ್ನು ಪಕ್ಷ ಮಾಡಲಿದೆ ಎಂದು ತಿಳಿಸಿದರು.
ಪ್ರಧಾನಮಂತ್ರಿಗಳು ರೌಡಿ ಶೀಟರ್ ಗೆ ಕೈಮುಗಿದಿರುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದ ಪ್ರಶ್ನೆಗೆ, ಅವರ ಪಕ್ಷ, ಅವರಿಗೆ ಯಾರು ಬೇಕೋ ಅವರನ್ನು ಸೇರಿಸಿಕೊಂಡಿದ್ದಾರೆ. ಅವರು ಸ್ಯಾಂಟ್ರೋ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಫೈಟರ್ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಅತ್ಯಾಚಾರಿಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳಲಿ, ಲಂಚಕೋರರನ್ನಾದರೂ ಇಟ್ಟುಕೊಳ್ಳಲಿ. ಅದು ಅವರ ಪಕ್ಷದ ವಿಚಾರ. ಅದರ ಬಗ್ಗೆ ನಾನ್ಯಾಕೆ ಮಾತನಾಡಲಿ ಎಂದು ಉತ್ತರಿಸಿದರು.




