ಬೆಂಗಳೂರು: ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ ನಾಗರಿಕರಿಗೆ ಇದೊಂದು ಸುಸಂದರ್ಭ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಬೆಂಗಳೂರು ಹಬ್ಬ -2026ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಹಿತ್ಯ, ಕಲೆ, ಸಂಸ್ಕೃತಿಗಳನ್ನು ಬೇರೆ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಮತ್ತು ಯುವ ಜನಾಂಗಕ್ಕೆ ತಲುಪಿಸುವುದು ಇದರ ಉದ್ದೇಶ. ಎಲ್ಲ ಊರುಗಳಲ್ಲಿ ಹಮ್ಮಿಕೊಳ್ಳುವ ಜಾತ್ರೆ, ಉತ್ಸವಗಳು ಜಾತಿ, ಧರ್ಮಗಳನ್ನು ಮರೆತು ಮನುಷ್ಯರಾಗಬೇಕು ಎನ್ನುವ ಸಂದೇಶವನ್ನು ಸಾರುತ್ತದೆ. ಮನುಷ್ಯರು ಪರಸ್ಪರ ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಯಾವುದೇ ಧರ್ಮವು ದ್ವೇಷಿಸಲು ಹೇಳುವುದಿಲ್ಲ ಎಂದರು.
ಕನ್ನಡ ನಾಡಿನಲ್ಲಿ ಬಸವಣ್ಣ, ಕನಕದಾಸರು, ನಾರಾಯಣಗುರುಗಳು ಸೇರಿದಂತೆ ಅನೇಕರು ಬಾಳಿ ಹೋಗಿದ್ದಾರೆ. ಇವರೆಲ್ಲರೂ ನಾವೆಲ್ಲ ಮನುಷ್ಯರೇ ಎಂದು ಸಾರಿ ಸಾರಿ ಹೇಳಿದವರು. ಬಸವಣ್ಣ ಜಾತಿ, ಧರ್ಮ, ವರ್ಗ, ಕಂದಾಚಾರ, ಮೌಢ್ಯಗಳು ತೊಲಗಬೇಕು ಎಂದು ಕರೆ ನೀಡಿದ್ದರು ಎಂದರು.
ಹುಟ್ಟು ಮತ್ತು ಸಾವು ಇವೆರಡರ ಮಧ್ಯೆ ನಾವೇನು ಮಾಡುತ್ತೇವೆ ಎನ್ನುವುದು ಮುಖ್ಯ. ಏನು ಸಾಧಿಸಿದೆವು, ಸಮಾಜಕ್ಕೆ ಏನು ಬಿಟ್ಟುಹೋಗಿದ್ದೇವೆ ಎನ್ನುವುದು ಮುಖ್ಯ. ಬೇರೆಯವರು ಅನುಸರಿಸುವ ರೀತಿಯಲ್ಲಿ ನಮ್ಮ ಹೆಜ್ಜೆ ಗುರುತುಗಳು ಇರಬೇಕೇ ಹೊರತು, ಅದನ್ನು ವಿರೋಧಿಸುವಂತಿರಬಾರದು ಎಂದರು.
ಭವ್ಯವಾದ ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆಯನ್ನು ನಾವು ಮರೆಯಬಾರದು. ನಾವೆಲ್ಲರೂ ಒಂದೇ ಎಂದು ಬಾಳಬೇಕಿರುವುದು ಅವಶ್ಯ ಎಂದರು.
ಪದ್ಮಿನಿ ರವಿ ಹಾಗೂ ನಂದಿನಿ ಆಳ್ವ ಅವರು ಪ್ರಾರಂಭಿಸಿದ ಬೆಂಗಳೂರು ಹಬ್ಬವನ್ನು ರವಿಚಂದರ್ ಮತ್ತು ಪ್ರಶಾಂತ್ ಪ್ರಕಾಶ್ ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು.
ಕನ್ನಡ ನಾಡಿನವರು ಕನ್ನಡ ಭಾಷೆಯನ್ನು ಕಲಿಯಬೇಕು. ಕನ್ನಡವನ್ನು ವ್ಯಾವಹಾರಿಕ ಭಾಷೆಯನ್ನಾಗಿಸಬೇಕು ಹಾಗೂ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ. ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು ಎಂದು ಕರೆನೀಡಿದರು.
ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಕನ್ನಡತನವನ್ನು ಬೆಳೆಸೋಣ. ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ ಎಂದು ಹಾರೈಸುತ್ತೇನೆ. ಬೆಂಗಳೂರಿನಲ್ಲಿ 1.40 ಕೋಟಿ ಜನ ನೆಲೆಸಿದ್ದಾರೆ. ನಾವೆಲ್ಲರೂ ಒಂದಾಗಿ ಬಾಳೋಣ, ಮನುಷ್ಯರಾಗೋಣ ಎಂದು ಕರೆನೀಡಿದರು.



