ಬೆಂಗಳೂರು: ಗುತ್ತಿಗೆ ಕಾರ್ಯಾದೇಶ ನೀಡಲು ಲಂಚ ಪಡೆದ ಘಟನೆ ಹಿನ್ನೆಲೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.
ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿದ ಕಾರ್ಯಕರ್ತರು ನಂತರ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳಿದಾಗ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು. ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಮುಂದೆ ಜಮಾಯಿಸಿದ ಕಾರ್ಯಕರ್ತರು ಸೂಟ್ ಕೇಸ್ ಹಿಡಿದು ಸರ್ಕಾರ ಮತ್ತು ಬಿಜೆಪಿ ವಿರುದ್ಧ ಘೋಷಣೆ ಮೊಳಗಿಸಿದರು.
ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ,ಲಂಚ ಪಡೆದ ಪ್ರಕರಣದಲ್ಲಿ ಕೇವಲ ಶಾಸಕರ ಪುತ್ರ ಪ್ರಶಾಂತ್ ಮಾಡಾಳು ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳು ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಬೊಮ್ಮಾಯಿ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ. ಇದಕ್ಕಿಂತ ದೊಡ್ಡ ದಾಖಲೆ ಇನ್ನೇನು ಬೇಕಿದೆ ಎಂದು ಪ್ರಶ್ನಿಸಿದರು.
ಲೋಕಾಯುಕ್ತ ಪೊಲೀಸರು 8 ಕೋಟಿಗೂ ಅಧಿಕ ಮೊತ್ತದ ಹಣ, ಆಭರಣಗಳನ್ನು ಮಾಡಾಳು ವಿರೂಪಾಕ್ಷಪ್ಪ ಅವರ ಮನೆಯಿಂದ ಸೀಜ್ ಮಾಡಿದ್ದಾರೆ. ನನ್ನ ಪ್ರಕಾರ ಬೊಮ್ಮಾಯಿ ಈಗಾಗಲೇ ರಾಜೀನಾಮೆ ಕೊಟ್ಟುಬಿಡಬೇಕಿತ್ತು.ಆದರೆ ಮಾನ ಮರ್ಯಾದೆ ಇಲ್ಲದೆ ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ ಎಂದು ಆಪಾದಿಸಿದರು.
ಬಿಜೆಪಿ ನಾಯಕರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಅವರಿಗೆ ಈ ಬಾರಿ ಜಾತಿ, ಧರ್ಮಗಳ ಆಧಾರದಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂಬುದು ಅರಿವಾಗಿದೆ ಹೀಗಾಗಿ ಹಣ ಚೆಲ್ಲಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 100 ಕೋಟಿ ಖರ್ಚು ಮಾಡಿದರೂ ಆಶ್ಚರ್ಯ ಇಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಅವರು ಆರೋಪ ಮಾಡಿದ್ದಾರೆ, ಇದಕ್ಕೇನು ಹೇಳ್ತೀರಿ ಶಾ? ಎಂದು ಪ್ರಶ್ನಿಸಿದ ಅವರು, ಈ ಸರ್ಕಾರದ ವಿರುದ್ಧ ಕೇಳಿಬಂದ ಯಾವುದೇ ಆರೋಪದ ಬಗ್ಗೆ ಯಾವುದೇ ತನಿಖೆಗೆ ಆದೇಶಿಸಿಲ್ಲ ಎಂದು ದೂರಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು, ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ, ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು. ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐ ಗೆ ವಹಿಸಿದ್ದೆ, ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ, ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ, ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ ಎಂದರು.
ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ಬಿ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ. ಈ ಬೊಮ್ಮಾಯಿಗೆ ಮಾನ ಮರ್ಯಾದೆ ಇದ್ದರೆ ಮಾಡಾಳ್ ವಿರೂಪಾಕ್ಷಪ್ಪನನ್ನು ಈ ಕೂಡಲೇ ಬಂಧಿಸಬೇಕು ಮತ್ತು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ನಂತರ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರನ್ನು ಪೊಲೀಸರು ತಡೆದರು. ಇದನ್ನು ವಿರೋಧಿಸಿ ಅವರು ರಸ್ತೆ ತಡೆ ಮಾಡಿದರು. ಈ ವೇಳೆ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದರು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಭಾಗಿಯಾಗಿದ್ದರು.




