ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

11 months ago

ಬಳ್ಳಾರಿ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಅರ್ಹರಿಂದ ಆನ್‌ಲೈನ್ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಹೊನ್ನುರಪ್ಪ ತಿಳಿಸಿದ್ದಾರೆ.

ಯೋಜನೆಗಳು: ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯ ನೀಡಲಾಗುವುದು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು.

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನ ಕಚೇರಿಯ ಎರಡನೇ ಮಹಡಿಯ ಬಿ ಬ್ಲಾಕ್ ನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ: 08392-267038 ಗೆ ಸಂಪರ್ಕಿಸಬಹುದು.

Leave a Reply