ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ ಹೊಂದಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿಕೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡುವುದಿಲ್ಲ ಒಂದು ವೇಳೆ ಈ ಸರ್ಕಾರ ತನ್ನಿಂತಾನೇ ಪತನ ಹೊಂದಿದರೆ ಅದಕ್ಕೆ ತಾವು ಜವಾಬ್ದಾರರಲ್ಲ ಎಂದರು.
ಏಕನಾಥ್ ಶಿಂಧೆ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಜವಾಬ್ದಾರಿಯುತವಾಗಿ ಮಾಧ್ಯಮದವರ ಮುಂದೆ ಹೇಳಿಕೆ ನೀಡುತ್ತಿದ್ದೇನೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಮ್ಮಿಂದ ನಡೆಯುವುದಿಲ್ಲ ಎಂದರು.
ನಾವು ವಿರೋಧಪಕ್ಷದಲ್ಲಿ ಕುಳಿತುಕೊಂಡು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇವೆ. ಪೂರ್ಣ ಬಹುಮತ ಹೊಂದಿರುವ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭದ ಮಾತಲ್ಲ, ಲೋಕಸಭಾ ಚುನಾವಣೆ ನಂತರ ನಡೆಯುವ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾವು ಈಗಲೇ ಭವಿಷ್ಯ ಹೇಳಲು ಸಾಧ್ಯವಿಲ್ಲ ಎಂದರು.
ಲೋಕಸಭಾ ಚುನಾವಣೆಯಲ್ಲಿ ತಮಗೆ ಉತ್ತಮವಾದ ಫಲಿತಾಂಶ ಬರಲಿದೆ. ನಮ್ಮ ನಿರೀಕ್ಷೆಗೂ ಮೀರಿ ಮತದಾನವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡಿದ್ದಾರೆ. ಎಲ್ಲಾ ರಾಜಕೀಯ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ಬಿಜೆಪಿ, ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಹೇಳಿಕೆ ಹೊರ ಬಿದ್ದ ಕೆಲವು ಹೊತ್ತಿನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಾಳಯದಲ್ಲಿ ಕೆಲವು ವಿದ್ಯಮಾನಗಳು ನಡೆದವು. ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್ ಟಿ ಸೋಮಶೇಖರ್ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಈ ಇಬ್ಬರೂ ಶಾಸಕರು ತಮ್ಮ ಪಕ್ಷದ ಅಭ್ಯರ್ಥಿಯ ಬದಲಾಗಿ ಕಾಂಗ್ರೆಸ್ ಅಭ್ಯರ್ಥಿಯ ಪರ ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇವರ ಭೇಟಿ ಕುತೂಹಲ ಮೂಡಿಸಿದೆ.
ಈ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಇದ್ದ ಸಮಯದಲ್ಲಿ ಆಪರೇಷನ್ ಕಮಲಕ್ಕೆ ತುತ್ತಾಗಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ್ದ 17 ಶಾಸಕರ ಪೈಕಿ ಪುನರ್ ಆಯ್ಕೆಯಾಗಿರುವ ಇನ್ನೂ ಕೆಲವರು ಕಾಂಗ್ರೆಸ್‌ನತ್ತ ಮರಳಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಶಾಸಕರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಕೆಲಸ ಮಾಡದೆ ತಟಸ್ಥವಾಗಿದ್ದರು ಎನ್ನಲಾಗುತ್ತಿದ್ದು, ಇದೀಗ ಈ ಇಬ್ಬರು ಶಾಸಕರು ಮೂಲಕ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿ ಸಂದೇಶ ಕಳುಹಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.




