ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮೂಲಕ ಫಲಾನುಭವಿಗಳಿಗೆ ನೀಡಬೇಕಾದ 97 ಕೋಟಿ ರೂಪಾಯಿಗಳನ್ನು ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರು ವ್ಯವಸ್ಥಿತವಾಗಿ ಗುಳುಂ ಮಾಡಿದ್ದಾರೆ. ಅವ್ಯವಹಾರ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 97 ಕೋಟಿ ರೂ. ದುರುಪಯೋಗ ಮಾಡಿರುವುದು ಪತ್ತೆಯಾಗಿದೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳನ್ನು ಪಡೆದುಕೊಂಡು ನಿಗಮದ ವಿವಿಧ ಯೋಜನೆಗಳ ಹೆಸರಿನಲ್ಲಿ ಆ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ. ಬಳಿಕ ಈ ಖಾತೆಗಳಿಗೆ ಜಮಾ ಆದ ಹಣವನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದನ್ನು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಂಧಿತ ಬಿ. ಕೆ. ನಾಗರಾಜಪ್ಪ ವಿಚಾರಣೆ ವೇಳೆ ಹೇಳಿದ್ದಾರೆ.
ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಬಂಧಿತರಾಗಿರುವ ನಾಗರಾಜಪ್ಪ, ಹಲವು ನಕಲಿ ಫಲಾನುಭವಿಗಳ ಖಾತೆಗಳನ್ನು ಬಳಸಿಕೊಂಡು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆ ಮಾಡಿರುವ ಸಂಗತಿ ಬಹಿರಂಗವಾಗಿದೆ.
ಹಗರಣದ ಸಂಬಂಧ ಬಂಧಿತ ನಾಗರಾಜಪ್ಪರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ವಶಕ್ಕೆ ಪಡೆದುಕೊಂಡು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಅಂಬೇಡ್ಕರ್ ರಸ್ತೆಯಲ್ಲಿನ ವಿವಿ ಟವರ್ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು, ಅನುಮಾನಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಏಪ್ರಿಲ್ 4ರಂದು ಇಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ಪರಿಶೀಲನೆ ವೇಳೆ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು, ಡಿಜಿಟಲ್ ದಾಖಲೆಗಳು, ಆಸ್ತಿ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಅವರನ್ನು ಬಂಧಿಸಲಾಗಿದೆ ಎಂದು ಇ.ಡಿ. ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಯೋಜನೆ ಮತ್ತು ನೇರ ಸಾಲ ಯೋಜನೆಗಳಡಿ ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಮಧ್ಯವರ್ತಿಗಳ ಮೂಲಕ ಆಮಿಷವೊಡ್ಡಿ ಸಾರ್ವಜನಿಕರ ಗುರುತಿನ ದಾಖಲೆಗಳು, ಬ್ಯಾಂಕ್ ಚೆಕ್ ಪಡೆದು ದುರ್ಬಳಕೆ ಮಾಡಿಕೊಂಡಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಈ ಸಂಬಂಧ ಮೂರು ದಿನಗಳ ಹಿಂದೆ ನಿಗಮದ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ನಾಗರಾಜಪ್ಪ ಹಾಗೂ ಲೀಲಾವತಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯವನ್ನು ಇಡಿ ಅಧಿಕಾರಿಗಳು ಕೈಗೊಂಡಿದ್ದರು. ಈ ಕುರಿತು ವಿಚಾರಣೆ ನಡೆಸಿದ ವೇಳೆ ಸರಿಯಾದ ಮಾಹಿತಿ ನೀಡದ್ದರಿಂದ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.



