ಬೆಂಗಳೂರು: ವಿಧಾನಸಭೆಯ ಚುನಾವಣೆ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ಇದೀಗ ವಿದ್ಯಮಾನಗಳು ತೀವ್ರಗತಿಯಲ್ಲಿ ನಡೆಯುತ್ತಿದೆ ನಾಯಕತ್ವವಿಲ್ಲದೆ ಸೊರಗಿರುವ ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಾಗಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಸ್ವಪಕ್ಷೀಯರು ಬಂಡಾಯ ಸಾರಿದ್ದಾರೆ. ಪ್ರತಿಪಕ್ಷ ನಾಯಕನ ಆಯ್ಕೆ ಇನ್ನೂ ಸಾಧ್ಯವಾಗಿಲ್ಲ. ಇದರಿಂದ ಗೊಂದಲ ಮುಂದುವರಿದಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ರಂಗ ಪ್ರವೇಶ ಮಾಡಿದ್ದು ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ರಣಕಹಳೆ ಮೊಳಗಿಸಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಕಛೇರಿಯಲ್ಲಿ ಪಕ್ಷ ಸಂಘಟನೆ ಸೇರದಂತೆ ಹಲವಾರು ವಿಷಯಗಳ ಕುರಿತು ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಕಾರ್ಯವೈಖರಿ ವಿರುದ್ಧ ಕಿಡಿ ಕಾರಿದರು.
ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಮತದಾರರಿಗೆ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಮುಂದೆ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರೊಂದಿಗೆ ಬೆಳಗ್ಗೆಯಿಂದ ಸಂಜೆಯವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ನಡೆಸುತ್ತೇನೆ ಎಂದು ಪ್ರಕಟಿಸಿದರು.
ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೆ ಹೋರಾಟ ಮಾಡಲಿದ್ದಾರೆ. ನಾನು ಉಳಿದ ಕಾರ್ಯಕರ್ತರೊಂದಿಗೆ ಸೇರಿ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸುತ್ತೇನೆ ರಾಜ್ಯದ ಉಳಿದ ಕಡೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ವಿಧಾನಸಭೆಯ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ರಾಜ್ಯದಲ್ಲೆಡೆ ಮತದಾರರ ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು.
ಅವರು ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು; ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ರೂ. ಭತ್ಯೆ, ಡಿಪ್ಲೊಮಾ ಮಾಡಿ ನಿರುದ್ಯೋಗಿ ಆಗಿರುವವರಿಗೆ 1,500 ರೂ. ಕೊಡಬೇಕು, 200 ಯೂನಿಟ್ ಕರೆಂಟ್ ಕೊಡಲೇಬೇಕು ಎಂದು ಒತ್ತಾಯಿಸಿದರು.



