ಬಜೆಟ್ ಅಧಿವೇಶನದ ವೇಳೆಗೆ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು: ಬೊಮ್ಮಾಯಿ

3 years ago

ಬೆಳಗಾವಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಲವಾರು ಹುದ್ದೆಗಳು‌ ಖಾಲಿ ಇದ್ದು ಇವುಗಳ ನೇಮಕಕ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ. ಹೀಗಾಗಿ ಮುಂದಿನ ಬಜೆಟ್ ಅಧಿವೇಶನದ ವೇಳೆಗೆ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ  ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 34 ಇಲಾಖೆಗಳಲ್ಲಿ ಬರೋಬ್ಬರಿ 7.69  ಲಕ್ಷ ಹುದ್ದೆಗಳಿದ್ದು, ಈ ಪೈಕಿ ಈಗಾಗಲೇ 5.11 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ ಎಂದು ಹೇಳಿದರು.

ಇದರಲ್ಲಿ 2.50  ಲಕ್ಷ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದೆ. ಇದರ ಭಾಗವಾಗಿ ಮುಂದಿನ ಬಜೆಟ್ ಅಧಿವೇಶನವರೆಗೆ 1 ಲಕ್ಷ ಹುದ್ದೆ ತುಂಬಲಾಗುವುದು ಎಂದರು.

ರಾಜ್ಯ ಸರ್ಕಾರದಲ್ಲಿ ಒಟ್ಟು 43 ವಿವಿಧ ಇಲಾಖೆಗಳಿವೆ. ಎ ಯಿಂದ ಡಿ ದರ್ಜೆ ವರೆಗಿನ ಹುದ್ದೆಗಳನ್ನು ನಾವು ಭರ್ತಿ ಮಾಡಲಿದ್ದೇವೆ. ಹಾಗೇ ಮಾಹಿತಿ ಪ್ರಕಾರ ಶೇ. 34 ರಷ್ಟು ಹುದ್ದೆಗಳು ಖಾಲಿ ಇವೆ. ಆದರೂ, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಖಾಲಿಯಿರುವ ಹುದ್ದೆಗಳಲ್ಲಿ ಹೆಚ್ಚುವರಿ ಪ್ರಭಾರದಲ್ಲಿರಿಸಿ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ವ್ಯವಸ್ಥೆ ಮಾಡಲಾಗಿದೆ. ಇದರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುವುದಿಲ್ಲ ಎಂದು ಅವರು ಹೇಳಿದರು.

ಭೂ ಪರಿವರ್ತನೆ: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದೇ ಅಧಿವೇಶನದಲ್ಲಿ ಈ ಸಂಬಂಧ ವಿಧೇಯಕ ಕೂಡ ತರಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ.

ಮಂಜುನಾಥ ಭಂಡಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿಯೇತರ ಭೂ ಪರಿವರ್ತನೆಗಾಗಿ ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

Leave a Reply