ಬೆಂಗಳೂರು: ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್, ಇದೀಗ ಭೂ ಅಕ್ರಮ ಸುಳಿಯಲ್ಲಿ ಸಿಲುಕಿದ್ದಾರೆ. ಇವರ ವಿರುದ್ಧದ ಅಕ್ರಮ ಭೂ ಮಂಜೂರಾತಿ ಆರೋಪ ಪ್ರಕರಣಕ್ಕೆ ಜೀವ ಬಂದಿದೆ. ಪ್ರಕರಣದ ಬಗ್ಗೆ ಲೋಕಾಯುಕ್ತ ನಡೆಸಿರುವ ತನಿಖೆ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಲೋಕಾಯುಕ್ತಕ್ಕೆ ಆದೇಶ ನೀಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಿಜೆಪಿ ಶಾಸಕರಾಗಿದ್ದ ಆರ್.ಅಶೋಕ್ 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದರು. ಈ ವೇಳೆ ಅವರು ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಎ.ಆನಂದ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
ಈ ದೂರು ಆಧರಿಸಿ ಎಸಿಬಿ ಪೊಲೀಸರು ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಆರ್ ಅಶೋಕ್, ತಾವು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ತನ್ನ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಜತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್ ಆಧರಿಸಿ ತನ್ನ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಮಧ್ಯಂತರ ಮನವಿ ಮಾಡಿಕೊಂಡಿದ್ದರು.
ಎಸಿಬಿ ರದ್ದುಗೊಂಡ ನಂತರ ಈ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಆರ್ ಅಶೋಕ್ ಅವರ ಮನವಿಯನ್ನು ತಿರಸ್ಕರಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ತನಿಖೆ ನಡೆಸಬಹುದು ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಅಶೋಕ್ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ.




