ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ ಮತ್ತು ಕಿರುಕುಳಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆ

1 year ago

ಬೆಂಗಳೂರು: ಸಾಲ ವಸೂಲಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಡೆಸುತ್ತಿರುವ ದೌರ್ಜನ್ಯ ಮತ್ತು ಕಿರುಕುಳಕ್ಕೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಈ ಉದ್ದೇಶದಿಂದ ‘ಕರ್ನಾಟಕ ಮೈಕ್ರೊ ಫೈನಾನ್ಸ್‌ ಕಂಪ‍ನಿಗಳು ಹಣ ಲೇವಾದೇವಿ ನಿಯಂತ್ರಣ ಮಸೂದೆ- 2025’ ಸಿದ್ಧಪಡಿಸಿದ್ದು ಇದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. 

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾನವೀಯವಾಗಿ ಮೈಕ್ರೋ ಪೈನಾನ್ಸ್​ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ವರದಿಯಾಗಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು.
 
ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ. ಸಂಪುಟ ಸಭೆಯಲ್ಲಿ ಸಂಪೂರ್ಣ ಅಧಿಕಾರ ಸಿಎಂ ಅವರಿಗೆ ನೀಡಲಾಗಿದೆ ಎಂದರು.

ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಮತ್ತು ಪ್ರಮುಖ ಸಚಿವರೊಂದಿಗೆ ಉನ್ನತಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧರಿಸಲಾಯಿತು.

ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲು ನಿರ್ಧರಿಸಿದ ಸಭೆ, ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು ಎಂದು ತಂಡಕ್ಕೆ ಸೂಚನೆ ನೀಡಿತು.

ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುತ್ತಿದೆ. ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಓಂಬುಡ್ಸ್‌ಮನ್‌ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗಲಿದೆ.

ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುತ್ತಿದೆ. ಪ್ರಸ್ತುತ ಇರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ಅದನ್ನು ಯಾಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ ಎಂದು ಚರ್ಚಿಸಿ, ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂಬ ನಿರ್ಧಾರಕ್ಕೆ ಬರಲಾಗಿದೆ.

Leave a Reply