ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು: ಸಿದ್ದರಾಮಯ್ಯ

2 years ago

ಬೆಂಗಳೂರು: ಧರ್ಮ – ಜಾತಿಯ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಾಂಧೀಜಿಯವರ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ ಎಂದರು.

ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಭ್ರಿತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದರು.

ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತು ನೂರಕ್ಕೆ ನೂರರಷ್ಟು ಸತ್ಯ. ಮನುಷ್ಯ – ಮನುಷ್ಯರ ನಡುವೆ ಸಹಿಷ್ಣುತೆ, ಸೌಹಾರ್ದತೆ ರೂಢಿಸಿಕೊಳ್ಳದಿದ್ದರೆ ಜಗತ್ತು ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದರು.

ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲ್ಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಢ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ ಎಂದರು.

ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಢ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಹೇಳಿದರು.

ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ ಎಂದರು.

ದೇಶದ ಶೇ.85 ರಷ್ಟು ಆಸ್ತಿ ಶೇ.1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರ ವಿಚಾರಗಳಲ್ಲಿ ಮಾರ್ಗಗಳಿವೆ. ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದರು.

ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷ ವಿಶುಕುಮಾರ್ , ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಹಾಜರಿದ್ದರು.

Leave a Reply