ಬೆಂಗಳೂರು: ಕಿತ್ತೂರು ಕರ್ನಾಟಕದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಮಹದಾಯಿ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿ ಅನುಮತಿ ನೀಡಲು ನಿರಾಕರಿಸಿದ ಬೆನ್ನಲ್ಲೇ ಗೋವಾ ಸರ್ಕಾರದ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಲಾಬಿ ಆರಂಭಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ಗೋವಾ ಸರ್ಕಾರದ ಮಹತ್ವಾಕಾಂಕ್ಷೆಯ ವಿದ್ಯುತ್ ಯೋಜನೆಗೆ ಕರ್ನಾಟಕ ತಕರಾರು ತೆಗೆದಿದ್ದು ಅದನ್ನು ಮಾಡದಂತೆ ಪ್ರಧಾನಿ ಸಲಹೆ ಮಾಡಿದ್ದಾರೆ.
ಗೋವಾ – ತಮ್ನಾರ್ 400 ಕೆ.ವಿ. ವಿದ್ಯುತ್ ಮಾರ್ಗದ ಯೋಜನೆ ಗೋವಾಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ಯೋಜನೆಯಾಗಿದ್ದು, ಇದಕ್ಕೆ ಯಾವುದೇ ಅಡ್ಡಿ ಮಾಡದೆ ಸಹಕಾರ ನೀಡುವಂತೆ ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಇದು ರಾಷ್ಟ್ರೀಯ ಗ್ರಿಡ್ ಅಭಿವೃದ್ಧಿಯ ಭಾಗ. ಈ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಛತ್ತೀಸಗಡದ ತಮ್ನಾರ್ನಿಂದ ಗೋವಾಕ್ಕೆ ವಿದ್ಯುತ್ ಸರಬರಾಜು ಮಾಡುವ ಯೋಜನೆ ಇದಾಗಿದೆ. ಈ ಮಾರ್ಗ ಕರ್ನಾಟಕದ ಮೂಲಕ ಹಾದು ಹೋಗುತ್ತದೆ. ಈ ಹಾದಿಯಲ್ಲಿ ಈಗಾಗಲೇ 400 ಕೆ.ವಿ. ಮಾರ್ಗ ಇದೆ. ಇದು ರಾಷ್ಟ್ರೀಯ ಪ್ರಾಮುಖ್ಯತೆಯ ಯೋಜನೆ. ಇದು ರಾಷ್ಟ್ರೀಯ ಗ್ರಿಡ್ ಅಭಿವೃದ್ಧಿಯ ಭಾಗ. ಈ ಯೋಜನೆಯ ಅನುಷ್ಠಾನಕ್ಕೆ ಸಹಕಾರ ನೀಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.
ರಾಜ್ಯ ಸರ್ಕಾರಕ್ಕೆ ಪ್ರಧಾನಿ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಹಿರಿಯ ಅಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದ್ದು, ಯೋಜನೆ ಕುರಿತು ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಯೋಜನೆ ಕುರಿತು ಕಳೆದ ಮಾರ್ಚ್ನಲ್ಲಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಅವರು, ಈ ಯೋಜನೆಗೆ ಕರ್ನಾಟಕದ 435 ಎಕರೆ ಅರಣ್ಯ ಒದಗಿಸುವ ಪ್ರಸ್ತಾವನೆಗೆ ಒಪ್ಪಿಗೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಮಾಡಿದ್ದ ಶಿಫಾರಸಿಗೆ ತಡೆ ಒಡ್ಡಿದ್ದರು.
ಛತ್ತೀಸಗಡದ ತಮ್ನಾರ್ನಿಂದ ಗೋವಾಕ್ಕೆ ವಿದ್ಯುತ್ ಸರಬರಾಜು ಮಾಡುವ 400 ಕೆ.ವಿ. ಸಾಮರ್ಥ್ಯದ ವಿದ್ಯುತ್ ಮಾರ್ಗ ಧಾರವಾಡದ ನರೇಂದ್ರದಿಂದ ಗೋವಾಕ್ಕೆ ಹೋಗಲಿದೆ. ಯೋಜನೆ ಅಸ್ತಿತ್ವಕ್ಕೆ ಬಂದಿರುವ ಗೋವಾ ತಮ್ನಾರ್ ಟ್ರಾನ್ಸ್ಮಿಷನ್ ಪ್ರಾಜೆಕ್ಟ್ ಲಿಮಿಟೆಡ್, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿನ ಪಶ್ಚಿಮ ಘಟ್ಟ ಅರಣ್ಯ ಪ್ರದೇಶದ ಸೂಕ್ಷ್ಮ ಅರಣ್ಯವನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಲು ಒಪ್ಪಿಗೆ ನೀಡುವಂತೆ ಪ್ರಸ್ತಾವ ಸಲ್ಲಿಸಿತ್ತು.
ಈ ಯೋಜನೆಗೆ ಗೋವಾದ ಭಗವಾನ್ ಮಹಾವೀರ ವನ್ಯಜೀವಿ ಧಾಮದ 27 ಹೆಕ್ಟೇರ್ ಅರಣ್ಯ ಬಳಕೆಗೆ ಒಪ್ಪಿಗೆ ಕೇಳಿತ್ತು. ಈ ಪ್ರಸ್ತಾವಕ್ಕೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ 79ನೇ ಸಭೆಯಲ್ಲಿ ಷರತ್ತುಬದ್ಧ ಒಪ್ಪಿಗೆ ನೀಡಿತ್ತು.
ಆದರೆ ಇದಕ್ಕೆ ಹಲವು ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಉದ್ದೇಶಿತ ವಿದ್ಯುತ್ ಮಾರ್ಗ ದಾಂಡೇಲಿ ಆನೆ ಕಾರಿಡಾರ್, ಭೀಮಗಡ ಅಭಯಾರಣ್ಯದ ಪರಿಸರ ಸೂಕ್ಷ್ಮವಲಯ, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮವಲಯ ಹಾಗೂ ದಾಂಡೇಲಿ ಅಭಯಾರಣ್ಯಗಳ ಮೂಲಕ ಹಾದುಹೋಗಲಿದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ಕಾಡು ನಾಶವಾಗಲಿದೆ. ಸಾವಿರಾರು ಅಪರೂಪದ ವನ್ಯಜೀವಿಗಳು ಅಸ್ತಿತ್ವ ಕಳೆದುಕೊಳ್ಳಲಿವೆ ಎಂದು ಆತಂಕ ವ್ಯಕ್ತಪಡಿಸಿದ ಪರಿಸರ ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಅರಣ್ಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಪರಿಸರವಾದಿಗಳ ಈ ಆತಂಕಕ್ಕೆ ದನಿಗೂಡಿಸಿರುವ ಈಶ್ವರ ಖಂಡ್ರೆ, ನೀಡಿದ್ದ ಅನುಮತಿ ವಾಪಸ್ ಪಡೆಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ನರೇಂದ್ರ ಮೋದಿ ಮಧ್ಯಪ್ರವೇಶದ ಮೂಲಕ ಯೋಜನೆ ಬೇರೆ ಸ್ವರೂಪ ಪಡೆದುಕೊಂಡಿದೆ. ಮುಂದೆ ಏನಾಗಲಿದೆ ಎಂದು ಕಾದುನೋಡಬೇಕಿದೆ.




