ಪೋಕ್ಸೋ ಪ್ರಕರಣ: ಬಿ.ಎಸ್.ಯಡಿಯೂರಪ್ಪ ಬಂಧನ ಸಾಧ್ಯತೆ

2 years ago

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.

ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿದ್ದರು.

ಆದರೆ ಯಡಿಯೂರಪ್ಪ ತಕ್ಷಣ ವಿಚಾರಣೆಗೆ ಹಾಜರಾಗಲು ನಿರಾಕರಿಸಿ, ತಾವು ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಮತ್ತೊಂದಡೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ದುರುದ್ದೇಶ ಪೂರ್ವಕವಾಗಿದ್ದು ಅದನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ ಅವರ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು.

ಪ್ರಕರಣ ಸಂಬಂಧ ಮಾಜಿ ಸಿಎಂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಕೋರ್ಟ್, ಯಡಿಯೂರಪ್ಪ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿತು. ನ್ಯಾಯಾಲಯದ ಈ ಆದೇಶದಿಂದ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ.

ಮತ್ತೊಂದೆಡೆ ಅಪ್ರಾಪ್ತ ಬಾಲಕಿಯ ಸೋದರ ಹೈಕೋರ್ಟ್ ಮೊರೆ ಹೋಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅತ್ಯಂತ ಪ್ರಭಾವಿಯಾಗಿದ್ದಾರೆ. ಅವರ ಒಬ್ಬ ಮಗ ಸಂಸದರಾಗಿದ್ದು, ಇನ್ನೊಬ್ಬ ಮಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಅವರು ಪ್ರಕರಣದಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬಂಧನಕ್ಕೆ ಒಳಪಡಿಸಿ ವಿಚಾರಣೆ ನಡೆಸಲು ಸೂಚಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ದೂರಿನ ಆಧಾರದ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ.

Leave a Reply