ಕಲಬುರಗಿ: ಚಿಂಚೋಳಿ ತಾಲೂಕಿನ ಕುಂಚಾವರಂ ಠಾಣಾ ವ್ಯಾಪ್ತಿಯ ವಸತಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಮತ್ತು ಕಂಪ್ಯೂಟರ್ ಆಪರೇಟರ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬಾಲಕಿಯರ ಮೈ-ಕೈ ಮುಟ್ಟುವುದು, ಅಸಭ್ಯವಾಗಿ ಮತ್ತು ಅಶ್ಲೀಲವಾಗಿ ಮಾತನಾಡುವುದು, ಕೊಠಡಿಯಲ್ಲಿ ಮಲಗಿದಾಗ ಇಣುಕಿ ನೋಡುತ್ತಾರೆ ಎಂಬ ಆರೋಪ ಮಾಡಿರುವ ವಿದ್ಯಾರ್ಥಿನಿಯರು, ಊಟ ಮಾಡದೇ ಮುಖ್ಯ ಶಿಕ್ಷಕ ಮತ್ತು ಕಂಪ್ಯೂಟರ್ ಆಪರೇಟರ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಈ ವಿಷಯ ಪಾಲಕರಿಗೆ ತಿಳಿದು ವಸತಿ ಶಾಲೆಗೆ ಆಗಮಿಸಿ ಕಂಪ್ಯೂಟರ್ ಆಪರೇಟರ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಈ ಕುರಿತು ಮಾಹಿತಿ ಪಡೆದ ಚಿಂಚೋಳಿ ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕಲಬುರಗಿ ಎಸ್ಪಿ ಇಶಾ ಪಂತ್ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಲನೆ ನಡೆಸಿದರು. ಜೊತೆಗೆ ಉಪವಾಸ ನಿರತ ವಿದ್ಯಾರ್ಥಿಗಳೊಂದಿಗೆ ಆಪ್ತಸಮಾಲೋಚನೆ ನಡೆಸಿ ಊಟ ಮಾಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಸಮಾಜ ಕಲ್ಯಾಣ ಇಲಾಖೆಯ ಚಿಂಚೋಳಿ ತಾಲೂಕು ಸಹಾಯಕ ನಿರ್ದೇಶಕ ಪ್ರಭುಲಿಂಗ ವಾಲಿ ನೀಡಿದ ದೂರಿನ ಮೇರೆಗೆ ವಸತಿ ಶಾಲೆ ಮುಖ್ಯಶಿಕ್ಷಕ ಮತ್ತು ಕಂಪ್ಯೂಟರ್ ಆಪರೇಟರ್ ವಿರುದ್ಧ ಕುಂಚಾವರಂ ಠಾಣೆಯಲ್ಲಿ ಪೋಕ್ಸೋ ಮತ್ತು ದಲಿತರ ಮೇಲೆ ದೌರ್ಜನ್ಯ ಕಾಯ್ದೆಗಳ ಅಡಿ ದೂರು ದಾಖಲಾಗಿದೆ. ಆರೋಪಿಗಳಿಬ್ಬರನ್ನೂ ಪೊಲೀಸರು ಬಂಧಿಸಿ ವಿಚಾರಣೆ ಆರಂಭಿಸಿದ್ದಾರೆ.



