ವಲ್ನೆರಬಲ್, ಕ್ರಿಟಿಕಲ್ ಮತಗಟ್ಟೆಗಳ ಸಮೀಕ್ಷೆ
ದಾವಣಗೆರೆ: 2024 ರ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು ಜಿಲ್ಲೆಯಲ್ಲಿ ಮುಕ್ತ ಹಾಗೂ ಶಾಂತಿಯುತ ಚುನಾವಣೆ ನಡೆಸಲು ವಲ್ನೆರಬಲ್, ಕ್ರಿಟಿಕಲ್ ಮತಗಟ್ಟೆಗಳ ಸಮೀಕ್ಷೆ ಕೈಗೊಂಡು ಸುವ್ಯವಸ್ಥಿತವಾದ ಚುನಾವಣೆ ನಡೆಸಲು ಅಧಿಕಾರಿಗಳು ಸಿದ್ಧರಾಗಬೇಕೆಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಕರೆನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮುಕ್ತ, ಶಾಂತಿಯುತ ಚುನಾವಣೆ ನಡೆಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಕೈಗೊಂಡ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಅವರು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದಾವಣಗೆರೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ವಿಜಯನಗರ ಜಿಲ್ಲೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಸೇರಲಿದೆ ಎಂದರು.
ಈ ಹಿಂದೆ ನಡೆದ ಚುನಾವಣಾ ಸಂದರ್ಭದಲ್ಲಿ ನಡೆದ ಗುಂಪು ಘರ್ಷಣೆ ಮತ್ತು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳನ್ನು ಆಧರಿಸಿ ಸಾರ್ವಜನಿಕರು ಮುಕ್ತವಾಗಿ ಮತದಾನ ಮಾಡಲು ಬೇಕಾದ ವಾತಾವರಣ ಕಲ್ಪಿಸಲು ದುರ್ಬಲ ಪ್ರದೇಶಗಳನ್ನು ಗುರುತಿಸಿ ಇದರ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಿ ಇಲ್ಲಿ ಶಾಂತಯುತವಾದ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ವರದಿ ನೀಡಲು ಎಲ್ಲಾ ತಹಶೀಲ್ದಾರರಿಗೆ ಸೂಚಿಸಿದರು.
ಎಲ್ಲಾ ತಹಶೀಲ್ದಾರರು ಪ್ರತಿ ಮತಗಟ್ಟೆಗಳನ್ನು ಪರಿಶೀಲನೆ ನಡೆಸಿ ಮುಕ್ತ, ನ್ಯಾಯ ಸಮ್ಮತ, ಶಾಂತಿಯುತ ಚುನಾವಣೆ ನಡೆಸಲು ಬೇಕಾದ ಎಲ್ಲಾ ಸಿದ್ಧತೆಗಳ ಕುರಿತು ತಕ್ಷಣ ವರದಿ ನೀಡುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಹಾಜರಿದ್ದರು.




