ತರಬೇತಿ ಕಾರ್ಯಾಗಾರದಲ್ಲಿ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ನಿರ್ದೇಶನ
ಬಳ್ಳಾರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಪೂರ್ಣ ಕುಡಿಯುವ ನೀರಿನ ಪೂರೈಕೆಯ ಯೋಜನೆಯಾದ ಜಲಜೀವನ್ ಮಿಷನ್ ಕಾರ್ಯದ ಅನುದಾನ ಪೋಲಾಗದಂತೆ ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಫೀಡ್ಬ್ಯಾಕ್ ಫೌಂಡೇಶನ್ ವತಿಯಿಂದ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಪರಿಣಾಮಕಾರಿ ಅನುಷ್ಠಾನ ಕುರಿತು ಸೋಮವಾರ ಆಯೋಜಿಸಿದ್ದ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕು. ಹೀಗಾಗಿ ಕಾರ್ಯಾಗಾರ ಆಯೋಜಿಸಲಾಗಿದ್ದು, ಅವಳಿ ಜಿಲ್ಲೆಯ (ಬಳ್ಳಾರಿ ಮತ್ತು ವಿಜಯನಗರ) ಅಧಿಕಾರಿಗಳು, ಸಿಬ್ಬಂದಿಗಳು ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು. ಯೋಜನೆಯ ಬಗ್ಗೆ ಕಾರ್ಯಗಾರದಲ್ಲಿ ಪಡೆದುಕೊಂಡ ಸಮಗ್ರ ವಿವರದೊಂದಿಗೆ ಕಾರ್ಯ ಯೋಜನೆ ರೂಪಿಸಿಕೊಂಡು ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಮುದಾಯದ ಜನರ ಪರಸ್ಪರ ಸಹಕಾರದೊಂದಿಗೆ ಜಲ ಜೀವನ್ ಮಿಷನ್ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿ ಮತ್ತು ಸಿಬ್ಬಂದಿ ಶ್ರಮಿಸಬೇಕು. ಇದಕ್ಕೆ ಆಯಾ ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಅಧಿಕಾರಿಗಳು ಕೈಜೋಡಿಸಬೇಕು ಎಂದರು.
ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದ ಆಧಾರದ ಮೇಲೆ ವಿಶ್ವಬ್ಯಾಂಕ್ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಮುಖ್ಯವಾಗಿ ಪೈಪ್ ಅಳವಡಿಕೆ ಕಾರ್ಯಕ್ಕೆ ಪ್ರಾಮುಖ್ಯತೆ ನೀಡಬೇಕು. ಕಲುಷಿತ ನೀರು ಸರಬರಾಜು ಮೂಲಗಳಿಂದ ದೂರ ಇರುವಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಅಧಿಕಾರಿ ಮತ್ತು ಸಿಬ್ಬಂದಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವಾಗ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಕಾರ್ಯನಿರ್ವಹಿಸುವುದು ಜವಾಬ್ದಾರಿಯಾಗಿದೆ ಎಂದರು.
ಕ್ಷೇತ್ರ ಮಟ್ಟದಲ್ಲಿ ಕಾರ್ಯಕ್ರಮಗಳ ಜೊತೆಗೆ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಅನುಷ್ಠಾನವಾಗುತ್ತಿರುವ ಕಾಮಗಾರಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ಹೊಂದಿರಬೇಕು. ಯೋಜನೆಯ ಬಗ್ಗೆ ಯಾವುದೇ ನ್ಯೂನತೆಗಳಿದ್ದರೆ ಸಾಧ್ಯವಾದಷ್ಟು ತಮ್ಮ ಹಂತದಲ್ಲಿಯೇ ಬಗೆಹರಿಸಲು ಶ್ರಮಿಸಬೇಕು. ಅದೇರೀತಿ ಯೋಜನೆಯ ಮಹತ್ವವನ್ನು ತಿಳಿಸಿ ಆ ಯೋಜನೆಯು ಅನುಷ್ಠಾನ ಮಟ್ಟದಲ್ಲಿ ಎಲ್ಲರ ಜೋತೆ ಸೇರಿ ಕೆಲಸ ಮಾಡಿದರೆ ಮಾತ್ರ ಈ ಯೋಜನೆಯು ಯಶಸ್ವಿಯಾಗುತ್ತದೆ ಎಂದರು.
ಕಾರ್ಯಗಾರದಲ್ಲಿ ಗುರುಗಾವ್ನ ಫೀಡ್ ಬ್ಯಾಕ್ ಫೌಂಡೇಶನ್ನ ಸಿಇಒ ಅಜಯ್ ಸೀನಾ ಅವರು ಶಿಬಿರಾರ್ಥಿಗಳಿಗೆ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನದ ಕುರಿತು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಿಮಳ, ಜಿಪಂ ಯೋಜನಾ ನಿರ್ದೇಶಕ ವಿನೋದ್ ಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹೆಚ್.ಇಂಧುದಾರ್, ವಿಜಯನಗರ ಜಿಲ್ಲೆಯ ದೀಪಾ.ಎಸ್., ಫೀಡ್ ಬ್ಯಾಂಕ್ ಫೌಂಡೇಶನ್ನ ರಾಜ್ಯ ಯೋಜನಾ ಸಮನ್ವಯಾಧಿಕಾರಿ ಡಾ.ನಂದಕುಮಾರ್ ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್, ವಿವಿಧ ಗ್ರಾಪಂ ಅಧ್ಯಕ್ಷರು, ಪಿಡಿಒ ಅಧಿಕಾರಿಗಳು ಹಾಗೂ ಅನೇಕರು ಹಾಜರಿದ್ದರು.




