ಜನನ-ಮರಣ ನೋಂದಣಿ ಪ್ರಗತಿ ಸಾಧಿಸಿ

2 years ago

ಬಳ್ಳಾರಿ: ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಗುವ ಜನನ-ಮರಣ ಅಂಕಿ-ಅಂಶಗಳನ್ನು ಶೇ.100ರಷ್ಟು ನೋಂದಣಿ ಮಾಡುವುದರ ಮೂಲಕ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ನರ ನಜೀರ್ಸಾನಬ್ ಸಭಾಂಗಣದಲ್ಲಿ ಜನನ-ಮರಣ ನೋಂದಣಿ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಂಗಳವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದ ಅವರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಜನನ-ಮರಣ ನೋಂದಣಿಯ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವುದರಿಂದ ಇ-ಜನ್ಮ ತಂತ್ರಾಂಶದ ಮೂಲಕ ಸಾರ್ವಜನಿಕರಿಗೆ ಜನನ ಹಾಗೂ ಮರಣ ಪ್ರಮಾಣ ಪತ್ರ ನಿಗಧಿತ ಕಾಲಾವಧಿಯಲ್ಲಿ ಪೂರೈಸಲು ಕ್ರಮ ವಹಿಸಬೇಕು ಹಾಗೂ ಜನನ-ಮರಣ ನೋಂದಣಿ ಕಾಯ್ದೆಯ ಅನುಸಾರವಾಗಿಯೇ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಎಸ್.ಎಮ್ ಮಾತನಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹೆಚ್ಚುವರಿಯಾಗಿ ಈ ಜವಾಬ್ದಾರಿಯನ್ನು ವಹಿಸಿದ್ದು, ಅವರು ಭಾರವೆಂದು ಭಾವಿಸದೇ ನಿಯಮಾನುಸಾರ ಗ್ರಾಮೀಣ ಭಾಗದಲ್ಲಿ ಘಟಿಸುವ ಜನನ-ಮರಣ ಘಟನೆಗಳನ್ನು ನಿಗಧಿತ ಕಾಲಾವಧಿಯೊಳಗೆ ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿ ಮಾಡುವ ಮೂಲಕ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಾಕೇಶ್, ಜಿಲ್ಲೆಯಲ್ಲಿ ಜನನ-ಮರಣ ಘಟನೆಗಳನ್ನು ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿ ಮಾಡುವ ಕುರಿತು ಕೂಲಂಕುಶವಾಗಿ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.

Leave a Reply