ಕಾರವಾರ: ಜಿಲ್ಲೆಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಕೈಗಾರಿಕೋದ್ಯಮಿಗಳ ವಿವಿಧ ಸಮಸ್ಯೆಗಳನ್ನು ಆದ್ಯತೆಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಇಲಾಖೆಯ, ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆ ಮತ್ತು ಕೈಗಾರಿಕಾ ಸ್ಪಂದನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಾಂಡೇಲಿಯ ಕೈಗಾರಿಕಾ ವಸಾಹತುವಿನಲ್ಲಿ ಹಂಚಿಕೆಯಾಗಿರುವ ನಿವೇಶನಗಳನ್ನು ನೋಂದಣಿ ಮಾಡಲು ಇರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಒಂದು ತಿಂಗಳ ಒಳಗೆ ಸಂಬಂಧಪಟ್ಟ ಕೈಗಾರಿಕೋದ್ಯಮಿಗಳಿಗೆ ನಿವೇಶನಗಳನ್ನು ನೋಂದಣಿ ಮಾಡಿಕೊಡುವಂತೆ ಸೂಚಿಸಿದರು.
ಕುಮಟಾ ಕೈಗಾರಿಕಾ ವಸಾಹತುನಲ್ಲಿ ಬೀದಿದೀಪಗಳ ಸಮಸ್ಯೆ ಬಗೆಹರಿಸಿ, ಪ್ರತ್ಯೇಕ ಫೀಡರ್ ಅಳವಡಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಬೇಕು, ರಾಮನಗರ ಕೈಗಾರಿಕಾ ವಸಾಹತುನಲ್ಲಿರುವ ಘಟಕಗಳಿಗೆ ನೀರು ಪೂರೈಸುವ ಬಗ್ಗೆ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡಲು ವಿದ್ಯುತ್ ಉಪ ಕೇಂದ್ರ ಸ್ಥಾಪನೆ ಮಾಡಬೇಕು ಎಂದರು.
ಜಿಲ್ಲೆಯ ಕೈಗಾರಿಕಾ ವಸಾಹತುಗಳಲ್ಲಿ ಈಗಾಗಲೇ ಹಂಚಿಕೆ ಮಾಡಲಾದ ಮಳಿಗೆಗಳಲ್ಲಿ ಇದುವರೆಗೆ ಚಟುವಟಿಕೆಯನ್ನು ಆರಂಭಿಸದೇ ಇರುವ ಘಟಕಗಳ ವಿರುದ್ದ ನಿಯಮಾನುಸಾರ ಕ್ರಮ ಕೈಗೊಂಡು, ಅವುಗಳನ್ನು ಅಗತ್ಯವಿರುವವರಿಗೆ ಮರು ಹಂಚಿಕೆ ಮಾಡಬೇಕು. ಹಂಚಿಕೆಯಾಗದೇ ಬಾಕಿ ಇರುವ ಮಳಿಗೆಗಳನ್ನು ಶೀಘ್ರದಲ್ಲಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಿ ಎಂದರು.
ಜಿಲ್ಲೆಯಲ್ಲಿ ಮುಡಗೇರಿಯಲ್ಲಿ ಹೊಸದಾಗಿ ಅಭಿವೃದ್ಧಿಪಡಿಸುತ್ತಿರುವ ಕೈಗಾರಿಕಾ ಪ್ರದೇಶಕ್ಕೆ ಸಂಬಂದಿಸಿದಂತೆ ಆದಷ್ಟು ಶೀಘ್ರದಲ್ಲಿ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚಿಸಿದರು.
ಪ್ರಧಾನಮಂತ್ರಿ ಉದ್ಯೋಗ ಸೃಜನೆ ಯೋಜನೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅನುಮೋದನೆ ಮಾಡುವಂತೆ ತಿಳಿಸಿದರು.
ಸಲ್ಲಿಕೆಯಾಗುವ ಪ್ರಸ್ತಾವನೆಗಳಲ್ಲಿ ಬದಲಾವಣೆಯ ಅಗತ್ಯವಿದ್ದಲ್ಲಿ ಅದನ್ನು ಅರ್ಜಿದಾರರಿಗೆ ತಿಳಿಸಿ ಸರಿಪಡಿಸಿ ಅನುಮೋದನೆ ನೀಡಿ, ಸಣ್ಣಪುಟ್ಟ ಕಾರಣಗಳಿಗೆ ಅರ್ಜಿಗಳನ್ನು ತಿರಸ್ಕರಿಸಬೇಡಿ ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಹಾಗೂ ಅರ್ಜಿ ಸಲ್ಲಿಸುವವರಿಗೆ ತಾವು ಕೈಗೊಳ್ಳುವ ಉದ್ದೇಶಿತ ಯೋಜನೆಯ ಬಗ್ಗೆ ಪ್ರಾಸ್ತಾವಿಕ ಯೋಜನಾ ವರದಿ ಸಲ್ಲಿಸುವ ಕುರಿತಂತೆ ಸೂಕ್ತ ಮಾಹಿತಿ ನೀಡುವಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ ಹಾಗೂ ಕೈಗಾರಿಕೋದ್ಯಮಿಗಳ ವಿವಿಧ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.
ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳು ಹಾಜರಿದ್ದರು.




