ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕ ಅಕ್ರಮ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಹಲವರಿಗೆ ಸಮನ್ಸ್ ನೀಡಲಾಗಿದೆ.
ಪಿಎಸ್ಐ ನೇಮಕ ಅಕ್ರಮದ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಏಕಸದಸ್ಯ ಆಯೋಗ ರಚಿಸಲಾಗಿದೆ. ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿ ಹೇಳಿಕೆ ಸಲ್ಲಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಶಾಸಕರಾದ ಮಾಜಿ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ್, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಶಾಸಕ ಬಸವರಾಜ ಧಡೇಸೂಗುರು ಸೇರಿದಂತೆ ಹಲವರಿಗೆ ಸಮನ್ಸ್ ನೀಡಲಾಗಿದೆ.
ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ ಆರೋಪದಡಿ ಪೇದೆ ಸಿ.ಎಸ್. ನಾಗೇಶ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಈತ, ಸಿ.ಎನ್. ಅಶ್ವತ್ಥನಾರಾಯಣ ಅವರ ಸಂಬಂಧಿ ಎಂದು ಸುದ್ದಿಯಾಗಿತ್ತು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಹಾಗೂ ಬಸನಗೌಡ ಪಾಟೀಲ ಯತ್ನಾಳ ಅವರು ಅಕ್ರಮದ ಬಗ್ಗೆ ಪ್ರಸ್ತಾಪಿಸಿದ್ದರು. ಅಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ ಧಡೇಸೂಗುರು ಭಾಗಿಯಾದ ಬಗ್ಗೆ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು.
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಿಎಸ್ಐ ಅಕ್ರಮದ ಬಗ್ಗೆ ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಅವರ ಸೋದರ ಸತೀಶ್, ಬಸನಗೌಡ ಪಾಟೀಲ್ ಯತ್ನಾಳ, ಬಸವರಾಜ ಧಡೇಸೂಗುರು ಇತರರನ್ನು ವಿಚಾರಣೆ ನಡೆಸಬೇಕು ಎಂದು ಕೆಲವು ವಕೀಲರು ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ದೂರು ಆಧರಿಸಿ ಎಲ್ಲರಿಗೂ ಇದೀಗ ಸಮನ್ಸ್ ಜಾರಿಗೊಳಿಸಲಾಗಿದೆ.




