ಬೆಂಗಳೂರು: ನಮ್ಮ ಗ್ರಾಮೀಣ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವಂತೆ ಮಾಡಲು ನಾನು ಪ್ರತ್ಯೇಕ ಕಾರ್ಯಕ್ರಮವನ್ನು ಆಲೋಚಿಸಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿಗಳ ಬಗ್ಗೆ ಚರ್ಚಿಸಿದ್ದೇನೆ. ಪ್ರತಿ ಎರಡು ಪಂಚಾಯ್ತಿಗಳನ್ನು ಸೇರಿಸಿ ಪಬ್ಲಿಕ್ ಶಾಲೆ ಆರಂಭಿಸಬೇಕು. ಅದಕ್ಕೆ ಬೇಕಾಗಿರುವ ಜಾಗವನ್ನು ಸರ್ಕಾರದ ವತಿಯಿಂದ ನೀಡುತ್ತೇವೆ. ನೀವು ಅಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಿ. ಪ್ರಮುಖ ಶಿಕ್ಷಣ ಸಂಸ್ಥೆಗಳು ಸರ್ಕಾರದ ಸಹಯೋಗದಲ್ಲಿ ಈ ಶಾಲೆಗಳ ಜವಾಬ್ದಾರಿ ವಹಿಸಿಕೊಳ್ಳುವಂತೆ ನಾವು ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಯೋಜನಾ ಇಲಾಖೆ ಆಯೋಜಿಸಿದ್ದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ನೀವು ನಮಗೆ ಹಣ ನೀಡಬೇಡಿ, ನಾವು ಕಾರ್ಯಕ್ರಮದ ರೂಪುರೇಷೆ ನೀಡುತ್ತೇವೆ. ನೀವೇ ಕಟ್ಟಡವನ್ನು ನಿರ್ಮಾಣ ಮಾಡಿ. ಈಗಾಗಲೇ ನಾನು ವಿಪ್ರೋ, ಇನ್ಫೋಸಿಸ್ ನಂತಹ ಪ್ರಮುಖ ಸಂಸ್ಥೆಗಳ ಜತೆ ಮಾತನಾಡಿದ್ದು ಅವರು ಸಾವಿರ ಕೋಟಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲು ಸಿದ್ಧರಿದ್ದಾರೆ ಎಂದರು.
ಮುಂದಿನ 3 ವರ್ಷಗಳಲ್ಲಿ ರಾಜ್ಯದ 2 ಸಾವಿರ ಗ್ರಾಮ ಪಂಚಾಯ್ತಿಗಳಲ್ಲಿ ಈ ಪಬ್ಲಿಕ್ ಶಾಲೆಗಳು ನಿರ್ಮಾಣವಾಗಲಿದ್ದು, ಸರ್ಕಾರದಿಂದ ಒಂದೇ ಒಂದು ರೂಪಾಯಿ ವೆಚ್ಚವಿಲ್ಲದೇ ನಿರ್ಮಾಣವಾಗಲಿದೆ ಎಂದು ನಾನು ಈ ವೇದಿಕೆ ಮೂಲಕ ನಮ್ಮ ಮುಖ್ಯಮಂತ್ರಿಗಳು ಹಾಗೂ ನಮ್ಮ ಸಹೋದ್ಯೋಗಿಗಳಿಗೆ ತಿಳಿಸಲು ಬಯಸುತ್ತೇನೆ. ಈ ವಿಚಾರದಲ್ಲಿ ಕಾರ್ಪೋರೇಟ್ ಸಂಸ್ಥೆಗಳ ಜವಾಬ್ದಾರಿ ಮಹತ್ವದ್ದಾಗಿದ್ದು, ನಾವು ಅವರಿಗೆ ಬೇಕಾದ ಎಲ್ಲಾ ಸಹಕಾರ ನೀಡಲು ಸಿದ್ಧರಿದ್ದೇವೆ ಎಂದರು.
ನಾವು ಮೊದಲು ಪ್ರಾಥಮಿಕ ಶಿಕ್ಷಣದ ಬಗ್ಗೆ ಗಮನಹರಿಸೋಣ, ನಂತರ ಹಂತಹಂತವಾಗಿ ಕೌಶಲ್ಯಾಭಿವೃದ್ಧಿಯತ್ತ ಗಮನಹರಿಸೋಣ. ಆಗ ಸಮಾಜ ತಾನಾಗಿಯೇ ಅಭಿವೃದ್ಧಿ ಹೊಂದುತ್ತದೆ. ನಾನು ಹುಟ್ಟಿನಿಂದ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣತಜ್ಞ, ಆಸಕ್ತಿಯಿಂದ ರಾಜಕಾರಣಿ. ಇಂದು ಶಿಕ್ಷಣ ತಜ್ಞನಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದರು.
ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಯೋಜನಾ ಇಲಾಖೆ ಸಚಿವ ಡಿ.ಸುಧಾಕರ್ ಹಾಗೂ ಮುಖ್ಯಮಂತ್ರಿಗಳ ಸಲಹೆಗಾರ ಗೋವಿಂದರಾಜ್ ಉಪಸ್ಥಿತರಿದ್ದರು.



