ಮಾ.9 ರಿಂದ ಪಿಯುಸಿ ಪರೀಕ್ಷೆ: ಉಚಿತ ಪ್ರಯಾಣಕ್ಕೆ ಅವಕಾಶ

3 years ago

ಬೆಂಗಳೂರು: ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9 ರಿಂದ ಆರಂಭವಾಗಲಿದೆ. ಪರೀಕ್ಷೆಗೆ ಪ್ರತಿಯೊಬ್ಬರು ಶಾಲಾ ಸಮವಸ್ತ್ರ ಧರಿಸಿ ಬರಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೆಲವು ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಪರೀಕ್ಷೆಗೆ ಹಿಜಾಬ್ ಅಷ್ಟೇ ಅಲ್ಲ ಸಮವಸ್ತ್ರ ಹೊರತು ಬೇರೆ ಉಡುಪು ಧರಿಸಿ ಬರುವಂತಿಲ್ಲ ಎಂದರು.

ಸುಗಮ ಪರೀಕ್ಷೆ ಪ್ರಕ್ರಿಯೆಗಾಗಿ ಎಲ್ಲಾ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಮಕ್ಕಳು ಅರ್ಧಗಂಟೆ ಮುಂಚೆ ಪರೀಕ್ಷಾ ಕೇಂದ್ರಗಳಿಗೆ ಬರಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಕೋಠಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದರು

ಉಚಿತ ಪ್ರಯಾಣ: ಈ ನಡುವೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕ ಅವರ ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಗೂ ಅಲ್ಲಿಂದ ಹಿಂತಿರುಗಲು ಕೆಎಸ್ಆರ್ಟಿಸಿ ಉಚಿತ ವ್ಯವಸ್ಥೆ ಮಾಡಿದೆ.

ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ ‘ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕ ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿ ನೀಡಲು ಕೆಎಸ್ಆರ್ಟಿಸಿ ನಿಗಮ ಸೂಚಿಸಿದೆ.

Leave a Reply