ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅನುದಾನ ಸಮರ್ಪಕವಾಗಿ ಬಳಕೆಯಾಗದಿದಲ್ಲಿ ಶಿಕ್ಷೆ: ಸಿದ್ದರಾಮಯ್ಯ

8 months ago

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಮಗ್ರ ಅಭಿವೃದ್ಧಿಗೆ ಬಜೆಟ್ ನಲ್ಲಿ ರೂಪಿಸಲಾಗಿರುವ ಯೋಜನೆ ಮತ್ತು ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಾತನಾಡಿದ ಅವರು ಈ ವರ್ಷ ಈ ಸಮುದಾಯಗಳ ಅಭಿವೃದ್ಧಿಗೆ 42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇ ಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದರು.

ಈ ಸಮುದಾಯಗಳಿಗೆ ರೂಪಿಸಿರುವ ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ. ಎಸ್‌ಸಿಎಸ್ಪಿ/ ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ ಎಂದರು.

ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು ಎಂದರು.

ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದರು.

ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ.ಈ ವರ್ಷ ಇದು ಸರಿಯಾಗಲಿದೆ.ಇನ್ನು ಮುಂದೆ ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನಸಂಖ್ಯೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು‌.

ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ ಎಂದರು.

ಈ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್,‌ ಸತೀಶ್‌ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

Leave a Reply