ಸ್ನೇಹ ಜೀವಿ, ಸರಳ, ಸಜ್ಜನಿಕೆಯ‌ ರಾಜಕಾರಣಿ ಆರ್. ಧೃವ ನಾರಾಯಣ್ ಕಾಲವಶ

3 years ago

ಮೈಸೂರು: ಸ್ನೇಹ ಜೀವಿ, ಸರಳ, ಸಜ್ಜನಿಕೆಯ‌ ರಾಜಕಾರಣಿ ಎಂದೇ ಮನೆ ಮಾತಾಗಿದ್ದ ಕೆಪಿಸಿಸಿ ಕಾರ್ಯಧ್ಯಕ್ಷ ಆರ್. ಧೃವ ನಾರಾಯಣ್ ಕಾಲವಶರಾಗಿದ್ದಾರೆ.

ತೀವ್ರ ಹೃದಯಾಘಾತದಿಂದ ಅವರು ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಶುಕ್ರವಾರ ಇಡೀ ದಿನ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಅವರು ರಾತ್ರಿ ಮನೆಗೆ ಆಗಮಿಸಿದ್ದರು.

ಸಂಜೆಯಿಂದಲೂ ತೀವ್ರ ಬಳಲಿದವರಂತಿದ್ದ‌ ಅವರು ಬಿಸಿಲು ಮತ್ತು ಬಿಡುವಿಲ್ಲದ ಕಾರ್ಯಕ್ರಮಗಳ ಕಾರಣದಿಂದ ಬಳಲಿಕೆ ಬಂದಿರಬಹುದು ಎಂದು ಕೊಂಡಿದ್ದರು. ಆದರೆ, ಮಧ್ಯರಾತ್ರಿ ಇದಕ್ಕಿದಂತೆ ತೀವ್ರತರನಾದ ಎದೆ ನೋವು ಕಾಣಿಸಿಕೊಂಡಿತ್ತು, ತಕ್ಷಣ ಅವರನ್ನು ಮೈಸೂರಿನ ಒಂಟಿಕೊಪ್ಪಲ್ಲಿನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ ವೇಳೆ ಕೊನೆಯುಸಿರೆಳೆದರು.

ಧ್ರುವನಾರಾಯಣ್ ಅವರಿಗೆ ಈಗಿನ್ನು 61 ವರ್ಷಗಳು. ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಾಧ್ಯಕ್ಷರಾಗಿ ಸದಾ ಚಟುವಟಿಕೆಯಿಂದ ಕೆಲಸ ನಿರ್ವಹಿಸುತ್ತಿದ್ದರು. ಧ್ರುವನಾರಾಯಣ್ ಅವರು ಪತ್ನಿ ಹಾಗೂ ಇಬ್ಬರು ಪುತ್ರರು, ಅಪಾರ ಬಂಧುಗಳು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ.

ಚಾಮರಾಜನಗರ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್‌ ಅವರ ಎದುರು ಸೋಲು ಕಂಡಿದ್ದ ಅವರು, ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು. ಧ್ರುವನಾರಾಯಣ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕಾಯಕ ಯೋಗಿ ಎಂದೇ ಗುರುತಿಸಿಕೊಂಡಿದ್ದವರು.

ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿಯಲ್ಲಿ 1961ರ ಆಗಸ್ಟ್‌ 31ರಂದು ಜನಿಸಿದ್ದರು. ಎಂ.ರಾಜಶೇಖರಮೂರ್ತಿಯವರ ಶಿಷ್ಯರಾಗಿರುವ ಅವರು 1999ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಚುನಾವಣಾ ರಾಜಕೀಯಕ್ಕೆ ಬಂದಿದ್ದರು.

2004ರ ವಿಧಾನಸಭಾ ಚುನಾವಣೆಯಲ್ಲಿ ಸಂತೇಮರಹಳ್ಳಿ ಕ್ಷೇತ್ರದಲ್ಲಿ ಎ.ಆರ್‌.ಕೃಷ್ಣಮೂರ್ತಿ ಅವರ ವಿರುದ್ಧ ಒಂದು ಮತದಿಂದ ರೋಚಕವಾಗಿ ಗೆದ್ದು ದೇಶದಾದ್ಯಂತ ಧ್ರುವನಾರಾಯಣ ಸುದ್ದಿಯಾಗಿದ್ದರು. ಚಾಮರಾಜನಗರ ಜಿಲ್ಲೆಯಲ್ಲಿ ರಾಜಕೀಯ ಜೀವನವನ್ನು ಈ ಗೆಲುವಿನೊಂದಿಗೆ ಭದ್ರಪಡಿಸಿದ್ದರು.

2009ರ ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷವು ಧ್ರುವನಾರಾಯಣ ಅವರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿತು. ಬಿಜೆಪಿಯ ಅಭ್ಯರ್ಥಿಯಾಗಿದ್ದ ಎ.ಆರ್.ಕೃಷ್ಣಮೂರ್ತಿ ವಿರುದ್ಧ 4,002 ಮತಗಳ ಅಂತರದಿಂದ ಗೆದ್ದು ರಾಷ್ಟ್ರರಾಜಕಾರಣಕ್ಕೆ ಹೋದರು. ಸಂಸದರಾಗಿ ಆಯ್ಕೆಯಾದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಮತ್ತೆ ಎ.ಆರ್‌.ಕೃಷ್ಣಮೂರ್ತಿ ವಿರುದ್ಧ 1,41,182 ಮತಗಳ ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಕ್ಷೇತ್ರದಾದ್ಯಂತ ಉತ್ತಮ ಸಂಸದ ಎಂದು ಮನೆಮಾತಾಗಿದ್ದ ಅವರು, ಸಂಸದರ ಪ್ರದೇಶಾಭಿವೃದ್ಧಿ ನಿಧಿ ಬಳಕೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದ್ದರು. ಅವರ ಎರಡು ಅವಧಿಯಲ್ಲಿ ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕೆಲಸಗಳಾಗಿದ್ದವು.

2019ರ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಶ್ರೀನಿವಾಸ ಪ್ರಸಾದ್‌ ವಿರುದ್ಧ ಸೋಲು ಅನುಭವಿಸಿದ್ದರು.

ಫಲಿತಾಂಶದ ಬಳಿಕ ಅವರು ಪಕ್ಷದ ಸಂಘಟನೆಯಲ್ಲಿ ತೊಡಗಿದ್ದರು. ವರಿಷ್ಠರು ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಮಾಡಿ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುವ ಜವಾಬ್ದಾರಿ ಹೊರಿಸಿತ್ತು.
ಮತ್ತೆ ರಾಜ್ಯ ರಾಜಕಾರಣಕ್ಕೆ ಬರಲು ಇಚ್ಛಿಸಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಟಿಕೆಟ್‌ ಬಯಸಿದ್ದರು. ಕ್ಷೇತ್ರದಲ್ಲಿ ಪ್ರಚಾರವನ್ನೂ ಆರಂಭಿಸಿದ್ದರು. ಅವರಿಗೆ ಟಿಕೆಟ್‌ ನೀಡುವುದು ನಿಚ್ಚಳವೂ ಆಗಿತ್ತು.

ತಮ್ಮ ಸಾರ್ವಜನಿಕ ಜೀವನದಲ್ಲಿ ಎಲ್ಲೂ ಎಡವದೇ ಇದ್ದ ಧ್ರುವನಾರಾಯಣ ಯಾವುದೇ ಕಪ್ಪು ಚುಕ್ಕೆ ಹೊಂದಿರಲಿಲ್ಲ. ಕ್ಷೇತ್ರದ ಜನರ ಸಂಪರ್ಕಕ್ಕೆ ಸದಾ ಸಿಗುವ ಧ್ರುವನಾರಾಯಣ ಅವರಿಗೆ ಎದುರಾಳಿ ಪಕ್ಷಗಳ ಮುಖಂಡರೊಂದಿಗೂ ಉತ್ತಮ ಬಾಂಧವ್ಯವನ್ನೂ ಹೊಂದಿದ್ದರು.

ರಾಜಕಾರಣದ ಎಲ್ಲ ಪಟ್ಟುಗಳನ್ನು ಅರಿತಿದ್ದ ಅವರು, ಚಾಣಾಕ್ಷ ರಾಜಕಾರಣಿ ಎಂದೇ ರಾಜಕೀಯ ವಲಯದಲ್ಲಿ ಜನಜನಿತರಾಗಿದ್ದರು.
ಶ್ರೀನಿವಾಸ ಪ್ರಸಾದ್‌ ನಂತರ ಮೈಸೂರು ಭಾಗದ ದಲಿತ ಸಮುದಾಯದ ಪ್ರಮುಖ ನಾಯಕರಾಗಿ ಹೊರಹೊಮ್ಮುತ್ತಾ ಬಂದಿದ್ದರು. ಕಳೆದ ಲೋಕಸಭಾ ಚುನಾವಣೆ ಸೋಲು ಅವರಿಗೆ ಕೊಂಚ ಹಿನ್ನಡೆ ತಂದಿತ್ತು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಳಿಕ ಮತ್ತೆ ಈ ಭಾಗದಲ್ಲಿ ತಮ್ಮ ಪ್ರಭಾವವನ್ನು ಬೆಳೆಸಿಕೊಂಡಿದ್ದರು.
ಧ್ರುವನಾರಾಯಣ ಅವರ ಹಠಾತ್‌ ಸಾವು, ಜಿಲ್ಲೆಯ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಆಘಾತ ಉಂಟಾಗಿದೆ. ಇವರ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ
ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Leave a Reply