ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ತಕ್ಷಣದ ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಪ್ರವಾಸ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೆತ್ತಿಕೊಳ್ಳಲು ಅವರು ಸೂಚಿಸಿದರು.
ರಾಜ್ಯದ ಎಲ್ಲ ಜಿಲ್ಲಾ ಪರಿಷತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊ ಸಭೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು ರಾಜ್ದದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ನೀರಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದು, ತಕ್ಷಣವೇ ಅವುಗಳಿಗೆ ಸ್ಪಂದಿಸಬೇಕೆಂದು ಹೇಳಿದರು.
ರಾಜ್ಯದ 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿದ್ದು, ಇವುಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಲಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಂದ ನೀರಿನ ತೀವ್ರ ಕೊರತೆಯಿದೆ ಎಂಬ ವಿಷಯವನ್ನು ಪ್ರಸ್ತಾಪಿಸಿಅಂತರ್ಜಲ ಕುಸಿತದಿಂದ ಬಳಲುತ್ತಿರುವ ಜಿಲ್ಲೆಗಳನ್ನು ಆದ್ಯತೆಯಾಗಿ ಪರಿಗಣಿಸಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಅವರು ನಿರ್ದೇಶಿಸಿದರು.
ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರು ನೀಡುವ ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕೆಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ ಸಚಿವರು, ತಾಲ್ಲೂಕು ಅಧಿಕಾರಿಗಳನ್ನು ದೂರು ನಿರ್ವಹಣೆ ಕಾರ್ಯಕ್ಕೆ ಸಜ್ಜುಗೊಳಿಸಲು ಸೂಚಿಸಿದರು.
ನೀರಿನ ಅಭಾವ, ಕಲುಷಿತ ನೀರು ಸರಬರಾಜು ಕುರಿತಂತೆ ಬರುವ ದೂರುಗಳಿಗೆ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಿ ತಕ್ಷಣದ ಕ್ರಮ ಕೈಗೊಳ್ಳಲು ಸಚಿವರು ನಿರ್ದೇಶಿಸಿದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಲ್ಲಿ ಜಿಲ್ಲಾ ಪಂಚಾಯತಿಗಳಿಗೆ ಹಣಕಾಸು ತೊಂದರೆ ಎದುರಾದಲ್ಲಿ ಅವಶ್ಯವಿರುವ ಹೆಚ್ಚುವರಿ ಅನುದಾನಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲು ಅವರು ಸೂಚಿಸಿದರು.
ರಾಜ್ಯದ 31 ಜಿಲ್ಲೆಗಳಲ್ಲಿ, 24 ಜಿಲ್ಲೆಗಳ 424 ಗ್ರಾಮಗಳಿಗೆ 365 ಟ್ಯಾಂಕರ್‌ಗಳ ಮೂಲಕ 969 ಟ್ರಿಪ್ ನೀರು ಸರಬರಾಜು ಮಾಡಲಾಗುತ್ತಿದೆ, ಇದರೊಂದಿಗೆ 431 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು, 357 ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಸಭೆಗೆ ತಿಳಿಸಲಾಯಿತು.



