ಚಾಮರಾಜನಗರ: ರೈತ ಮುಖಂಡ ರಾಕೇಶ್ ಠಿಕಾಯತ್ ವಿರುದ್ಧ ರಾಜ್ಯ ಸರ್ಕಾರ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕು ಮತ್ತು ಗುಜರಾತ್ ನಲ್ಲಿ ಬಂಧಿಸಿರುವ ಯುದ್ದವೀರಸಿಂಗ್ ಅವರನ್ನು ಬಿಡುಗಡೆ ಮಾಡಿ ಅವರ ವಿರುದ್ದ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಚಾಮರಾಜನಗರ ಜಿಲ್ಲಾ ರೈತ ಸಂಘದ ಮುಖಂಡ ಹೊನ್ನೂರು ಬಸವಣ್ಣ ಆಗ್ರಹಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅವರ ಹಿಂಬಾಲಕರನ್ನು ಬಿಟ್ಟು ಪ್ರತಿಭಟನೆಗಳನ್ನು ಹತ್ತಿಕ್ಕುವ ಕೆಲಸಮಾಡುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೇ ರಾಕೇಶ್ ಠಿಕಾಯತ್ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆದು, ಗುಜರಾತ್ ನಲ್ಲಿ ಬಂಧಿಸಿರುವ ಯುದ್ದವೀರಸಿಂಗ್ ಅವರನ್ನು ಬಿಡುಗಡೆ ಮಾಡಿ, ಅವರ ವಿರುದ್ದ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕೇಂದ್ರ ಸರ್ಕಾರ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಪ್ರಹಾರ ಮಾಡುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಬೆಲೆ ಏರಿಕೆ ನೀತಿಯನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ರೈತಸಂಘ ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದೆ ಎಂದು ಎಚ್ಚರಿಸಿದರು.




