ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿಕೆ
ಚಿತ್ರದುರ್ಗ: ಶಾಸಕರ ಅನುದಾನದಲ್ಲಿ ರೂ.20 ಲಕ್ಷ ಹಿರಿಯ ನಾಗರಿಕರಿಗಾಗಿಯೇ ಮೀಸಲು ಇರಿಸಿರುವುದಾಗಿ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹೇಳಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ನಗರದ ಜಿಲ್ಲಾ ಬಾಲಭವನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದ ವತಿಯಿಂದ ಹಮ್ಮಿಕೊಂಡಿದ್ದ “ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ” ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಯಶಸ್ವಿ ವ್ಯಕ್ತಿಗಳ ಹಿಂದೆ ಅವರ ಪೋಷಕರ ತ್ಯಾಗ ಇದೆ. ಮಕ್ಕಳ ಏಳಿಗೆಗಾಗಿ ಪೋಷಕರು ಯೌವ್ವನವನ್ನು ಮುಡುಪಾಗಿಡುತ್ತಾರೆ. ಆದರೆ ಬೆಳೆದು ದೊಡ್ಡವರಾದ ಮಕ್ಕಳು ವಯಸ್ಸಾದ ಪೋಷಕರನ್ನು ಎಷ್ಟರಮಟ್ಟಿಗೆ ನೋಡಿಕೊಳ್ಳುತ್ತಾರೆ ಎನ್ನುವುದು ಇಂದಿನ ಸಮಾಜದಲ್ಲಿ ಯಕ್ಷ ಪ್ರಶ್ನೆಯಾಗಿದೆ. ಹಿರಿಯ ನಾಗರಿಕರ ಆರೋಗ್ಯ ಮತ್ತು ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ ಎಂದರು.
ಪ್ರತಿ ಜಿಲ್ಲೆಯಲ್ಲಿ 3 ವೃದ್ಧಾಶ್ರಮಗಳನ್ನು ಸ್ಥಾಪಿಸಲಾಗಿದೆ. ಹಿರಿಯರಿಗಾಗಿ 1090 ಸಹಾಯವಾಣಿ ತೆರಯಲಾಗಿದೆ. ಆರೋಗ್ಯ ಸಮಸ್ಯೆ ಹಾಗೂ ಕಾನೂನು ನೆರವು, ಆಪ್ತ ಸಮಾಲೋಚನೆ ಪಡೆಯಲು ಹಿರಿಯ ನಾಗರಿಕರು ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಕೆ.ಎಸ್.ಆರ್.ಟಿ. ಬಸ್ ಪ್ರಯಾಣ ದರದಲ್ಲೂ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡಲಾಗಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 60 ರಿಂದ 65 ವರ್ಷದವರಿಗೆ ರೂ.800 ಹಾಗೂ 65 ವರ್ಷ ಮೇಲ್ಪಟ್ಟವರಿಗೆ ರೂ.1200 ನೀಡಲಾಗುತ್ತಿದೆ. ಇದರೊಂದಿಗೆ 2007ರಲ್ಲಿ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯನ್ನು ಸಹ ಜಾರಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಹಿರಿಯ ನಾಗರಿಕರ ಅವಹಾಲುಗಳನ್ನು ಆಲಿಸಲು ನ್ಯಾಯ ಮಂಡಳಿ ಸ್ಥಾಪಿಸಲಾಗಿದೆ ಎಂದರು.
ವಿಜ್ಞಾನ ಎಷ್ಟೇ ಮುಂದುವರೆದರೂ, ಇಂದಿಗೂ ಕೃತಕವಾಗಿ ಕಣ್ಣು ತಯಾರಿಸುವುದು ಸಾಧ್ಯವಾಗಿಲ್ಲ. ನಮ್ಮ ಕಣ್ಣುಗಳ ರಕ್ಷಣೆ ನಮ್ಮದೇ ಜವಾಬ್ದಾರಿಯಾಗಿದೆ. ಕೆ.ಸಿ.ವಿರೇಂದ್ರ ಪಪ್ಪಿ ಅಭಿಮಾನಿ ಬಳಗ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕ್ಷೇತ್ರದ 10 ಪಂಚಾಯಿತಿಗಳಲ್ಲಿ ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ವರ್ಗದವರಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಸಲಾಗಿದೆ ಎಂದರು.
4830 ಜನರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಗಿದೆ. 213 ಜನರನ್ನು ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆಗೆ ಕರೆದೊಯ್ದು ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಮಾಡಿಸಿ, ಸುರಕ್ಷಿತವಾಗಿ ಮರಳಿ ಅವರ ಮನೆಗಳಿಗೆ ತಲುಪಿಸಲಾಗಿದೆ. 861 ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಪಂಚಾಯಿತಿಗಳಲ್ಲಿಯೂ ಉಚಿತ ಕಣ್ಣಿನ ಶಿಬಿರ ಆಯೋಜಿಸಲಾಗುವುದು ಎಂದರು.
ಇದರೊಂದಿಗೆ ಸರ್ಕಾರದ ವತಿಯಿಂದ ಆಯೋಜಿಸಲಾದ ಶಿಬಿರದಲ್ಲೂ ಕಣ್ಣಿನ ತಪಾಸಣೆ ಹಾಗೂ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಹಿರಿಯ ನಾಗರಿಕರು ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ಡಾ.ಪ್ರದೀಪ್ ಮಾತನಾಡಿ, ನೇತ್ರದಾನ ಮಹಾದಾನ ಎನ್ನುವುದಕ್ಕಿಂತಲೂ ದೃಷ್ಟಿದಾನ ಮಹಾದಾನ. ಪ್ರತಿಯೊಬ್ಬರು ದೃಷ್ಟಿದಾನ ಮಾಡಬಹುದು. ಕಣ್ಣಿನ ತೊಂದರೆ ಇರುವ ತಮ್ಮ ನೆರೆ-ಹೊರೆಯ ಹಿರಿಯ ನಾಗರಿಕರನ್ನು ನೇತ್ರ ತಪಾಸಣಾ ಶಿಬಿರಗಳಿಗೆ ಕರೆದುಕೊಂಡು ಬರುವ ಮೂಲಕ ತಾವು ಸಹ ದೃಷ್ಟಿದಾನ ಮಾಡಬಹುದು. ಕಣ್ಣಿನ ತೊಂದರೆ ಇರುವವರು ಜಿಲ್ಲಾಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾಗಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಮುಪ್ಪು ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ಬರಲಿದೆ. ವಯಸ್ಸಾದಂತೆ ನಮ್ಮ ದೇಹವು ಅನೇಕ ಸಮಸ್ಯೆಗಳಿಗೆ ಒಳಗಾಗುತ್ತದೆ. ಅದರಲ್ಲಿ ಪ್ರಮುಖವಾಗಿ ಕಣ್ಣುಗಳು ಅತೀ ಅವಶ್ಯಕ. ಇಲಾಖೆ ವತಿಯಿಂದ ಇದೇ ಪ್ರಥಮ ಬಾರಿಗೆ ನೇತ್ರ ತಪಾಸಣೆ ಶಿಬಿರ ಏರ್ಪಡಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಿದ್ದು, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದರು.
ಮನೆಗೆ ಹಿರಿಯರು ಆಸ್ತಿ ಇದ್ದಂತೆ. ಹಿರಿಯ ನಾಗರಿಕರು ನಿಯಮಿತವಾಗಿ ಆರೋಗ್ಯ ತಪಾಸಣಾ ಮಾಡಿಕೊಂಡು ಪೌಷ್ಠಿಕಾಂಶ ಆಹಾರ ಸೇವಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಂಡು ಧೀರ್ಘಾಯುಷಿಗಳಾಗಿ ಬದುಕಬೇಕು ಎಂದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, 2024-25ನೇ ಸಾಲಿನಲ್ಲಿ ಹಿರಿಯ ನಾಗರಿಕರ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ವಿಶೇಷ ಅಭಿಯಾನ ಯೋಜನೆಯನ್ನು ಘೋಷಿಸಿದ್ದು, ಮಾರ್ಗಸೂಚಿಯನ್ವಯ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಮಂಜೂರಾತಿ ನೀಡಿ, ಸರ್ಕಾರ ಆದೇಶಿಸಿದೆ. ಅದರಂತೆ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲ ತಾಲ್ಲೂಕುಗಳಲ್ಲಿಯೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ 02 ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಬೇಕಾಗಿರುತ್ತದೆ. ಆದ್ದರಿಂದ ಪ್ರಥಮ ಹಂತದಲ್ಲಿ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ಪೊರೆ ಚಿಕಿತ್ಸೆಗಾಗಿ ಪೂರ್ವಭಾವಿ ಶಿಬಿರಗಳನ್ನು ಇದೇ ಜ.03 ರಿಂದ 10 ರವರಗೆ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ತಾಲ್ಲೂಕು ಪಂಚಾಯಿತಿ ಇಒ ವೈ.ರವಿಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ ಸೇರಿದಂತೆ ಹಿರಿಯ ನಾಗರಿಕರು ಹಾಜರಿದ್ದರು.




