ಬೆಂಗಳೂರು: ರಾಜ್ಯದಲ್ಲಿ 1.70 ಲಕ್ಷ ಮನೆ ನಿರ್ಮಾಣ ಪೂರ್ಣಗೊಂಡಿದ್ದು, 5.87 ಲಕ್ಷ ಮನೆಗಳಿಗೆ ಮಂಜೂರಾತಿ ದೊರೆತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ತಿನಲ್ಲಿ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಛಲವಾದಿ ನಾರಾಯಣ ಸ್ವಾಮಿ ಅವರ ಪರವಾಗಿ ಕೇಶವಪ್ರಸಾದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಪ್ರತಿವರ್ಷ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ ಎಂದರು.
ಸಿಎಂ ಸಿದ್ದರಾಮಯ್ಯ ಅವರು ಹಿಂದೆ ಪ್ರತಿವರ್ಷ 3 ಲಕ್ಷದಂತೆ 15 ಲಕ್ಷ ಮನೆ ನಿರ್ಮಾಣ ಮಾಡಿದ್ದರು. ಆದರೆ ಕಳೆದ ಸರ್ಕಾರ ಅಷ್ಟೇ ಪ್ರಮಾಣದ ಮನೆ ನಿರ್ಮಾಣ ಮಾಡಿದ್ದರೆ ವಸತಿ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ. ರಾಜ್ಯದಲ್ಲಿ ವಸತಿ ರಹಿತ, ನಿವೇಶನ ರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.




