ಬೆಂಗಳೂರು: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಸಕಾಲದಲ್ಲಿ ನೀಡುವ ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಮಾರ್ಚ್ 01ರ ವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಾಂದೀಪನಿ ಶಿಷ್ಯವೇತನ ಯೋಜನೆಯ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅಂದರೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 15,000 ರೂ ವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದಿದ್ದಾರೆ.
ಇನ್ನೂ ಸಿಇಟಿ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದ ಒಟ್ಟು ಮೊತ್ತದ 2/3 ಭಾಗ ಅಥವಾ ಗರಿಷ್ಠ ರೂ.1 ಲಕ್ಷದ ವರೆಗೆ ಶಿಷ್ಯವೇತನ ನೀಡಲು ಉದ್ದೇಶಿಸಲಾಗಿದೆ ಎಂದಿದ್ದಾರೆ.
ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಸಮುದಾಯದ ಅರ್ಹ ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕಾಗಿ ಕೋರಿದ್ದಾರೆ.




