ದೆಹಲಿ: ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದು, ತಮ್ಮನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸಬೇಕು. ಪಕ್ಷದಲ್ಲಿ ಹುದ್ದೆ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಕಾಂಗ್ರೆಸ್ ಹೈಕಮಾಂಡಿಗೆ ಪಕ್ಷದ ರಾಜ್ಯ ನಾಯಕರು ದೂರು ಸಲ್ಲಿಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಸತೀಶ್ ಜಾರಕಿಹೊಳಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಮಾತುಕತೆ ಸಮಯದಲ್ಲಿ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಕುರಿತು ವಿವರಣೆ ನೀಡಿದ ಸತೀಶ್ ಜಾರಕಿಹೊಳಿ, ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವ ತತ್ವವನ್ನು ಅನುಷ್ಠಾನಕ್ಕೆ ತರಬೇಕು ಎಂದು ಮನವಿ ಮಾಡಿರುವುದಾಗಿ ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಇದೀಗ ಲೋಕಸಭಾ ಚುನಾವಣೆ ಮುಗಿದು ಒಂದು ವರ್ಷ ಕಳೆದರೂ ಅಧ್ಯಕ್ಷ ಸ್ಥಾನದ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಡಿ ಕೆ ಶಿವಕುಮಾರ್ ಅವರು ಡಿಸಿಎಂ ಆಗಿದ್ದಾರೆ. ಜೊತೆಗೆ ಎರಡು ಪ್ರಮುಖ ಖಾತೆಗಳ ಜವಾಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಅವರು ಪಕ್ಷ ಸಂಘಟನೆಯ ಕಡೆಗೆ ಅಷ್ಟಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ವಿವರಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ಡಿ ಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರತಿನಿತ್ಯದ ಆಡಳಿತದ ಕಡೆ ಗಮನ ಹರಿಸುತ್ತಿದ್ದಾರೆ. ಹೀಗಾಗಿ ಪಕ್ಷ ಸಂಘಟನೆ ಸೊರಗಿ ಹೋಗಿದೆ. ಲೋಕಸಭಾ ಚುನಾವಣೆ ಮುಗಿದ ನಂತರ ಇಲ್ಲಿಯವರೆಗೆ ಒಮ್ಮೆಯೂ ಪದಾಧಿಕಾರಿಗಳ ಸಭೆ ಕರೆಯಲು ಸಾಧ್ಯವಾಗಿಲ್ಲ. ಕಾರ್ಯಕಾರಿ ಸಮಿತಿ ಕೂಡ ಸಭೆ ನಡೆಸಿಲ್ಲ. ಪಕ್ಷದ ಕಚೇರಿಯಲ್ಲಿ ದಿನಾಚರಣೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ಮನವರಿಕೆ ಮಾಡಿ ಕೊಟ್ಟಿರುವುದಾಗಿ ತಿಳಿದುಬಂದಿದೆ.
ಸದ್ಯದಲ್ಲಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯಲಿವೆ. ಇದಕ್ಕಾಗಿ ಪಕ್ಷವನ್ನು ಸಂಘಟನಾತ್ಮಕವಾಗಿ ಸಜ್ಜುಗೊಳಿಸಬೇಕು. ಆದರೆ ಆ ಕೆಲಸ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವಂತಹ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ನೇಮಕವಾಗಬೇಕಿದೆ ಎಂದು ಪ್ರತಿಪಾದಿಸಿರುವುದಾಗಿ ಗೊತ್ತಾಗಿದೆ.
ಡಿ ಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಲು ಯಾವುದೇ ತಕರಾರು ಇಲ್ಲ. ಆದರೆ ಅದಕ್ಕಾಗಿ ಅವರು ಡಿಸಿಎಂ ಸ್ಥಾನ ತೊರೆಯಬೇಕು. ಇಲ್ಲವಾದರೆ ಅವರು ಪಕ್ಷ ಸಂಘಟನೆಯ ಕಡೆ ಗಮನ ಹರಿಸಲು ಸಾಧ್ಯವಿಲ್ಲ. ಒಂದು ವೇಳೆ ಅವರು ಡಿಸಿಎಂ ಆಗಿ ಮುಂದುವರಿಯಲು ಬಯಸಿದರೆ, ಪಕ್ಷದ ಅಧ್ಯಕ್ಷ ಸ್ಥಾನ ತೊರೆಯಲು ಸೂಚಿಸಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
ತಾವು ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದೇವೆ. ಇದಕ್ಕಾಗಿ ನನ್ನದೇ ಆದ ಕಾರ್ಯ ಸೂಚಿಯನ್ನು ಸಿದ್ಧಪಡಿಸಿಕೊಂಡಿದ್ದೇನೆ. ಪಕ್ಷದ ನಾಯಕತ್ವ ಅವಕಾಶ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧನಿದ್ದೇನೆ ಎಂದು ವಿವರಿಸಿದ್ದಾರೆ.
ಇದರ ಜೊತೆಗೆ ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕೈ ಬಲಪಡಿಸುವ ಕೆಲಸ ಮಾಡಬೇಕು. ಅವರ ನಾಯಕತ್ವದಲ್ಲಿ ಪಕ್ಷವನ್ನು ಮತ್ತಷ್ಟು ಬಲಯುತವಾಗಿ ಸಂಘಟಿಸಬೇಕಾದ ಅಗತ್ಯವಿದೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.
ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯದಲ್ಲಿ ಅನಗತ್ಯ ಗೊಂದಲ ಉಂಟಾಗಿದೆ. ಶಾಸಕರು ಮತ್ತು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದೆ. ಹೈ ಕಮಾಂಡ್ ಇದಕ್ಕೆ ಇತಿಶ್ರೀ ಹಾಡಬೇಕು. ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆಯ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
ಒಂದು ವೇಳೆ ನಾಯಕತ್ವ ಬದಲಾವಣೆಯ ಕುರಿತ ಪ್ರಸ್ತಾಪ ಬಂದಲ್ಲಿ ಆ ಕುರಿತು ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.




