ಕಾರವಾರ: ಶಾಲೆಗಳು ಮಕ್ಕಳಿಗೆ ಶಿಕ್ಷಣ ನೀಡುವ ಕೇಂದ್ರಗಳಾಗುವುದು ಮಾತ್ರವಲ್ಲದೇ ಅವರಿಗೆ ಶಿಕ್ಷಣದ ಜೊತೆಗೆ ಸಂಪೂರ್ಣ ಸುರಕ್ಷೆ ಒದಗಿಸುವ ರಕ್ಷಣಾ ಕೇಂದ್ರಗಳಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಅಭಿಪ್ರಾಯಪಟ್ಟರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಉತ್ತರ ಕನ್ನಡ ಜಿಲ್ಲೆಯ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಆಯೋಜಿಸಿದ್ದ “ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ’ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಇತ್ತಿಚಿನ ದಿನಗಳಲ್ಲಿ ಪೋಷಕರಿಗೆ ಮಕ್ಕಳು ಶಾಲೆಯಿಂದ ಕ್ಷೇಮವಾಗಿ ಮನೆಗೆ ಬಂದರೆ ಸಾಕು ಎನುವಂತಾಗಿದೆ. ಕಾರಣ ಶಾಲೆಯಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು, ಶಾಲಾ ಆವರಣದಲ್ಲಿ ಸೂಕ್ತ ರಕ್ಷಣೆಯಿಲ್ಲದೇ ಅಸಹಜ ಸಾವುಗಳು ಸಂಭವಿಸುತ್ತಿವೆ. ಆದ್ದರಿಂದ ಶಾಲೆಯಲ್ಲಿ ಮಕ್ಕಳ ರಕ್ಷಣೆಗೆ ಅಗತ್ಯವಿರುವ ಸುರಕ್ಷತಾ ಕ್ರಮಗಳನ್ನು ಮತ್ತು ಮಕ್ಕಳ ರಕ್ಷಣಾ ನೀತಿಯನ್ನು ಅಳವಡಿಸಿಕೊಂಡು ಸಂಪೂರ್ಣ ರಕ್ಷಣೆ ಒದಗಿಸುವ ಮೂಲಕ ಅವರಿಗೆ ಶಿಕ್ಷಣದ ಜೊತೆಗೆ ರಕ್ಷಣೆ ನೀಡುವ ಕೆಲಸವಾಗಬೇಕಿದೆ ಎಂದರು.
ರಾಜ್ಯದಲ್ಲಿ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಅಳವಡಿಸಿಕೊಂಡು ಈ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು, ಅಫಿಡವಿಟ್ ಸಲ್ಲಿಸಿದ ನಂತರ ಶಾಲೆಯ ಆವರಣದಲ್ಲಿ ಮಕ್ಕಳಿಗೆ ಅಸುರಕ್ಷತೆಯ ವಾತಾವರಣ ಮತ್ತು ಅನಾಹುತ ಪ್ರಕರಣಗಳು ಸಂಭವಿಸಿದ್ದಲ್ಲಿ ಕುರಿತಂತೆ ಯಾವುದೇ ಪ್ರಕರಣಗಳು ವರದಿಯಾದಲ್ಲಿ ಸಂಬಂಧಪಟ್ಟ ಶಾಲೆಯ ಶಿಕ್ಷಕರಿಂದ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳವರೆಗೆ ಪ್ರತಿಯೊಬ್ಬರನ್ನೂ ಹೊಣೆಗಾರರನ್ನಾಗಿ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಶಾಲೆಗಳಲ್ಲಿ ಕೇವಲ ಶಿಕ್ಷಣ ಕೊಡುವುದಷ್ಟೆ ಅಲ್ಲದೇ ಮಕ್ಕಳಿಗೆ ರಕ್ಷಣೆಯನ್ನು ನೀಡಬೇಕೆಂಬುವುದು ಕೋವಿಡ್ ನಂತರ ಸ್ಪಷ್ಟವಾಗಿ ತಿಳಿದುಬರುತ್ತಿದೆ. ಕಳೆದ ಮೂರು ವರ್ಷದಲ್ಲಿ ರಾಜ್ಯದಲ್ಲಿ 18 ವರ್ಷದೊಳಗಿನ ಸುಮಾರು 5,000 ಮಕ್ಕಳು ಅಸಹಜ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ 21 ಇಲಾಖೆಗಳು ನೇರವಾಗಿ ಅಥವಾ ಪರೋಕ್ಷವಾಗಿ ಕೆಲಸ ಮಾಡಬೇಕಿದೆ. ಮಕ್ಕಳ ರಕ್ಷಣೆಗಾಗಿ ಜಿಲ್ಲಾ ಮಟ್ಟದಲ್ಲಿ ಅನೇಕ ಇಲಾಖೆಗಳು ಮತ್ತು ಸಮಿತಿಗಳು ಇದ್ದರು ಕೂಡ ರಾಜ್ಯ ಆಯೋಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ದೂರುಗಳು ಬರುತ್ತಿದ್ದು, ಖಾಸಗಿ ಶಾಲೆಗಳಲ್ಲಿ ವರ್ಗಾವಣೆ ಪತ್ರ ನೀಡಿದೆ ಇರುವ ಸಂಬಂಧಿಸಿದ 250 ಪ್ರಕರಣಗಳ ದೂರುಗಳು ಆಯೋಗಕ್ಕೆ ಬಂದಿವೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ಭೌತಿಕ ಶಿಕ್ಷಣದ ಜೊತೆಗೆ ಮಾನಸಿಕವಾಗಿ ಸಧೃಡರನ್ನಾಗಿ ಮಾಡಬೇಕು. ಮಕ್ಕಳು ಮನೆಗಿಂತಲೂ ಹೆಚ್ಚಿನ ಸಮಯ ಶಾಲೆಗಳಲ್ಲಿ ಕಳೆಯಲಿದ್ದು, ಅವರು ಶಾಲೆಯಲ್ಲಿ ಶಿಕ್ಷಕರೊಂದಿಗೆ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುವ ವಾತಾವರಣ ನಿರ್ಮಣವಾಗಬೇಕು. ಪೋಷಕರು ತಮ್ಮ ಮಕ್ಕಳು ಸುರಕ್ಷಿತ ವಾತಾವರಣದಲ್ಲಿರುತ್ತಾರೆ ಎಂಬ ವಿಶ್ವಾಸ ಮತ್ತು ನಂಬಿಕೆಯನ್ನಿಟ್ಟು ಮಕ್ಕಳನ್ನು ಶಾಲೆಗೆ ಕಳುಹಿಸಿರುತ್ತಾರೆ, ಇದಕ್ಕೆ ಚ್ಯುತಿ ಬಾರದಂತೆ ಶಿಕ್ಷಕರು ಮಕ್ಕಳ ಕಾಳಜಿ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ್, ಡಿಡಿಪಿಐಗಳಾದ ಲತಾ ಎಂ ನಾಯಕ, ಪಾರಿ ಬಸವರಾಜ, ಡಯಟ್ ಪ್ರಾಂಶುಪಾಲ ಶಿವರಾಮ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಾಳ್, ಸಂಪನ್ಮೂಲ ವ್ಯಕ್ತಿಗಳಾದ ಜಿ.ಎಸ್.ಭಟ್ ಸಂತೋಷ್ ಹಾಗೂ ಜಿಲ್ಲೆಯ ಶಿಕ್ಷಣ ಇಲಾಖೆಯ ಎಲ್ಲಾ ತಾಲೂಕುಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಲಸ್ಟರ್ ಮತ್ತು ಬ್ಲಾಕ್ ಮಟ್ಟದ ಸಂಪನ್ಮೂಲ ಅಧಿಕಾರಿಗಳು ಇದ್ದರು.




