ಬೆಂಗಳೂರು: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಯಾವುದೇ ಗೊಂದಲ, ಅನಗತ್ಯ ವಿವಾದಗಳಿಗೆ ಅವಕಾಶ ನೀಡದೆ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಪತ್ರ ಬರೆದಿರುವ ಸಭಾಪತಿ, ಡಿಸೆಂಬರ್ 4ರಿಂದ 10 ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಅರ್ಥಪೂರ್ಣ ಚರ್ಚೆ ನಡೆದು ಅವುಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಸಲಹೆ ನೀಡಿದ್ದಾರೆ.
ಅಧಿವೇಶನದ ಅತ್ಯಮೂಲ್ಯವಾದ ಸಮಯ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತ ಹಾಗೂ ಅರ್ಥಪೂರ್ಣವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭವಾಗುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.
ವಿವಿಧ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ, ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸಚಿವರಿಗೆ ಸೂಚಿಸಬೇಕು ಹಾಗೂ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪತ್ರದಲ್ಲಿ ಸೂಚಿಸಿದ್ದಾರೆ.
ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು ಸಾರ್ಥಕವಾಗುತ್ತದೆ ಎಂದಿದ್ದಾರೆ.




