ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಬೀಸುತ್ತಿದೆ. ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇದೀಗ ಕಾಂಗ್ರೆಸ್ ಶಾಸಕನ ಮನೆಯಲ್ಲಿ ಬಿಜೆಪಿ ಚಿಂತನೆ ಅರಳಿದೆ. ನಾಳೆ ಸಿದ್ದರಾಮಯ್ಯ ಅವರ ಮಗ, ಡಿಕೆ ಶಿವಕುಮಾರ್ ಅವರ ಕುಟುಂಬ ಕೂಡಾ ಬಿಜೆಪಿಗೆ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವಾಸು ಅವರ ಪುತ್ರ ಕವೀಶ್ ಗೌಡ ಮತ್ತವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಮಾತನಾಡಿದ ಅವರು, ಕಾಂಗ್ರೆಸ್ ನವರ ಬಸ್ ಹೊರಟಿದೆ. ಹೋಗ್ತಾ, ಹೋಗ್ತಾ ಬ್ರೇಕ್ ಫೇಲ್ ಆಗಲಿದೆ. ಜೆಡಿಎಸ್ ಪಂಚರತ್ನ ಯಾತ್ರೆಯೂ ಪಂಕ್ಚರ್ ಆಗಲಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು, ಹಾಸನ, ಬೆಂಗಳೂರಿನ ಕಾಂಗ್ರೆಸ್, ಜೆಡಿಎಸ್ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಜಯಭೇರಿ ಬಾರಿಸಲಿದ್ದೇವೆ ಎಂದರು.



