ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಪ್ರಕರಣದ ಬಗ್ಗೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ನಾಳೆ ಹೈಕೋರ್ಟಿನಲ್ಲಿ ವಿಚಾರಣೆಗೆ ಬರುತ್ತಿರುವ ಬೆನ್ನಲ್ಲೇ ಜಾರಿ ನಿರ್ದೇಶನಾಲಯದಲ್ಲಿ ಸ್ಫೋಟಕ ವಿದ್ಯಮಾನಗಳು ನಡೆದಿವೆ.
ಈ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ಪತ್ನಿಗೆ ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬುದನ್ನು ಜಾರಿ ನಿದೇರ್ಶನಾಲಯ ಪತ್ತೆ ಹಚ್ಚಿದೆ. ಸಿದ್ದರಾಮಯ್ಯ ಅವರ ಪತ್ನಿಗೆ ಪ್ರಾಧಿಕಾರದಲ್ಲಿ ಪರ್ಯಾಯವಾಗಿ 14 ನಿವೇಶನಗಳನ್ನು ಹಸ್ತಾಂತರಿಸಿರುವ ಪ್ರಕರಣದಲ್ಲಿ ಹಲವು ಅಕ್ರಮಗಳು ನಡೆದಿರುವ ಬಗ್ಗೆ ಪುರಾವೆಗಳು ಸಿಕ್ಕಿವೆ ಎಂದು ಇ.ಡಿ. ಲೋಕಾಯುಕ್ತಕ್ಕೆ ಪತ್ರ ಬರೆದಿದೆ.
ಪ್ರಕರಣ ಸಂಬಂಧ ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಇತ್ತೀಚೆಗೆ ಕಳುಹಿಸಿದ ಸಂವಹನದಲ್ಲಿ, ಮುಡಾ ಒಟ್ಟು 1,095 ಸೈಟ್ಗಳನ್ನು ಬೇನಾಮಿ ಮತ್ತು ಇತರ ವಹಿವಾಟುಗಳಲ್ಲಿ ಅಕ್ರಮವಾಗಿ ಮಂಜೂರು ಮಾಡಿದೆ ಎಂಬುದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಹೇಳಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ವೇಳೆ, ಭೂಪರಿವರ್ತನೆಯಲ್ಲಿ ಕಾನೂನುಬದ್ಧ ಮಾರ್ಗಸೂಚಿಗಳ ಉಲ್ಲಂಘನೆ, ಕಚೇರಿಯ ಕಾರ್ಯವಿಧಾನಗಳ ಉಲ್ಲಂಘನೆ, ಅನಾವಶ್ಯಕ ಕೃಪಾಕಟಾಕ್ಷ ಮತ್ತು ಪ್ರಭಾವದ ಬಳಕೆ ಹಾಗೂ ಸಹಿಗಳ ಫೋರ್ಜರಿಗೆ ಸಾಕ್ಷ್ಯಾಧಾರಗಳು ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಸಿದ್ದರಾಮಯ್ಯ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್.ಜಿ.ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ.ಕುಮಾರ್ ಅವರು ಈ ಪ್ರಕ್ರಿಯೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಇ.ಡಿ. ಹೇಳಿಕೊಂಡಿದೆ.
ಮುಡಾದಲ್ಲಿ ಆಪಾದಿತ ಅಕ್ರಮ ಚಟುವಟಿಕೆಗಳು ಪಾರ್ವತಿ ಪ್ರಕರಣದೊಂದಿಗೆ ಕೊನೆಗೊಂಡಿಲ್ಲ. 700 ಕೋಟಿ ರೂ.ಗಿಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಒಟ್ಟು 1,095 ಸೈಟ್ಗಳನ್ನು ಕಾನೂನುಬಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದು ಇ.ಡಿ. ತನಿಖಾ ವರದಿ ಹೇಳಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬರುವ ಹಿಂದಿನ ದಿನ ಇ.ಡಿ.ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದು ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ದುರುದ್ದೇಶದಿಂದ ಕೂಡಿದೆ ಎಂದು ಆಪಾದಿಸಿದ್ದಾರೆ.
ಇ.ಡಿ. ಯವರು ಮುಡಾ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅವರು ತನಿಖೆ ನಡೆಸುತ್ತಿರುವುದೇ ಸರಿಯಿಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದರು.
ಡಿ.24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇ.ಡಿ. ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿ, ಲೋಕಾಯುಕ್ತದ ತನಿಖೆಯ ದಿಕ್ಕು ಅನುಮಾನ ಮೂಡಿಸಿರುವ ನಡುವೆ ಜಾರಿ ನಿರ್ದೇಶನಾಲಯದಿಂದ ಹೊರಬಂದಿರುವ ವರದಿ ಮುಖ್ಯಮಂತ್ರಿಗಳ ಮುಖವಾಡ ಬಯಲು ಮಾಡಿದೆ ಎಂದರು.
ಇಷ್ಟಾಗಿಯೂ ತಮ್ಮ ಭಂಡತನ ಮುಂದುವರಿಸಲು ನಿರ್ಧರಿಸಿರುವ ಸಿದ್ದರಾಮಯ್ಯ ದೆಹಲಿಯ ಹಿಂದಿನ ಸಿಎಂ ಕೇಜ್ರಿವಾಲ್‌ರಂತೆ ಜೈಲಿಗೆ ಹೋದರೂ ಮುಖ್ಯಮಂತ್ರಿ ಗಾದಿ ಬಿಡುವುದಿಲ್ಲ ಎಂಬ ಶಪಥ ಕೈಗೊಂಡಂತಿದೆ ಎಂದರು.
ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ದೊರೆತಿದ್ದ 14 ನಿವೇಶನಗಳು ಹಾಗೂ ಸಾವಿರಾರು ನಿವೇಶನಗಳ ಲೂಟಿಕೋರತನದ ಹಗರಣದ ಹಿನ್ನಲೆ ಈ ಹಿಂದೆಯೂ ದಾಖಲೆಗಳ ಆಧಾರದ ಮೇಲೆ ಸಿದ್ದರಾಮಯ್ಯನವರ ಪಾತ್ರವನ್ನು ಸಾಕ್ಷೀಕರಿಸುತ್ತಿತ್ತು. ಇದರ ಆಧಾರದ ಮೇಲೆ ಉಚ್ಛ ನ್ಯಾಯಾಲಯ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯ ನಿರ್ಧಾರವನ್ನು ಎತ್ತಿ ಹಿಡಿದು ತನಿಖೆಗೆ ಮುಕ್ತ ಅವಕಾಶ ಕಲ್ಪಿಸಿ ಕೊಟ್ಟಿತ್ತು ಎಂದರು.
ಮುಡಾಗೆ ಸಾವಿರಾರು ಕೋಟಿ ರೂಪಾಯಿ ನಷ್ಟವಾಗಿರುವುದನ್ನು ಅಂದಿನ ಜಿಲ್ಲಾಧಿಕಾರಿಗಳೇ ಸರ್ಕಾರಕ್ಕೆ ಪತ್ರ ಬರೆದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ದಾಖಲಾದ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆ ವಾಸ್ತವ ಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತಿದೆ. ಇದರ ವಾಸನೆಯನ್ನು ಅರಿತೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಹೈಕಮಾಂಡ್ ಬೆದರಿಸಲು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲು ಹೊರಟಿದ್ದರು. ಕಾಂಗ್ರೆಸ್ ವರಿಷ್ಠರಿಗೂ ಮುಖ್ಯಮಂತ್ರಿಗಳು ಭಂಡತನದಿಂದ ಅಧಿಕಾರದಲ್ಲಿ ಮುಂದುವರೆಯುವುದು ಬೇಕಿಲ್ಲ. ಈ ಕಾರಣಕ್ಕಾಗಿಯೇ ಹಾಸನದ ಸಿದ್ದರಾಮಯ್ಯನವರ ಸ್ವಪ್ರತಿಷ್ಠೆಯ ಸ್ವಾಭಿಮಾನಿ ಸಮಾವೇಶಕ್ಕೆ ಕಡಿವಾಣ ಹಾಕಿದ್ದಾರೆ ಎಂದರು.




