ಯುವನಿಧಿ ಯೋಜನೆಗೆ ಚಾಲನೆ ನೀಡಿದ ಸಿದ್ದರಾಮಯ್ಯ

2 years ago

ಯಾವ‌ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. – ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯುವನಿಧಿ ಯೋಜನೆಗೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಈ ಮೂಲಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ನೀಡಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಈಡೇರಿದಂತಾಗಿದೆ.

ಶಿವಮೊಗ್ಗದಲ್ಲಿ ಏರ್ಪಡಿಸಿದ್ದ ಅದ್ದೂರಿ ಸಮಾರಂಭದಲ್ಲಿ ರಾಜ್ಯದ ವಿವಿಧೆಡೆಯಿಂದ ಬಂದಿದ್ದ 15 ಯುವಕರಿಗೆ ಸಿ ಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ನಿರುದ್ಯೋಗ ಭತ್ಯೆಯ ಚೆಕ್ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಿದರು.

ಈ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ, ಮಧು ಬಂಗಾರಪ್ಪ, ಬಿ.ನಾಗೇಂದ್ರ, ಮಂಕಾಳ್ ವೈದ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸಿದ್ದರಾಮಯ್ಯ, ಯಾವ‌ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದರು.

ನಾನು ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಎಂದರು.

ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ 130 ಕೋಟಿ 28 ಲಕ್ಷ ಮಹಿಳೆಯರು, ಯುವತಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆ ಅನ್ವಯ 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕೋಟಿ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ ಅನ್ನಭಾಗ್ಯ ಯೋಜನೆ ಮೂಲಕ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2000 ರೂ ತಲುಪಿಸುತ್ತಿದ್ದೇವೆ‌. ಇಂಥಾ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದೇ ನುಡಿದಂತೆ ಮಾಡಿ ತೋರಿಸಿದ ಸರ್ಕಾರ ಎಂದರು

ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು. 

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌ ಎಂದರು. 

ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಆದ್ದರಿಂದ ಪ್ರತಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಿ ಎಂದರು. 

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ತಿಳಿಸಿದರು. 1985 ರಲ್ಲಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲ ಬಾರಿಗೆ ವಿವೇಕಾನಂದ ಜಯಂತಿಯನ್ನು ಆರಂಭಿಸಿದರು ಎಂದು ಎಂದು ಹೇಳಿದರು.

ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು. ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ “ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ” ಆಗಲಿ. ಇದಕ್ಕಾಗಿ ಜನ ಚಳವಳಿ ನಡೆಯಲಿ ಎಂದರು. . 

ಈ ವೇಳೆ ಮಾತನಾಡಿದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಯುವನಿಧಿ ಅಡಿ ಈಗ 70 ಸಾವಿರ ವಿದ್ಯಾರ್ಥಿಗಳ ನೋಂದಣಿ ಆಗಿದೆ. ಇದರ ಲಾಭ ಪಡೆಯಿರಿ ಎಂದರು.

ನಿರುದ್ಯೋಗಿಗಳಿಗೆ ಹಣ ಕೊಡುವುದು ಮಾತ್ರವಲ್ಲ. ಅಭ್ಯರ್ಥಿಗಳ ಇಷ್ಟದ ಕೆಲಸಕ್ಕೆ ತರಬೇತಿ ಕೊಡಿಸಲಾಗುವುದು. ನಿರುದ್ಯೋಗ ದೊಡ್ಡ ಸಮಸ್ಯೆ. ನಿರಾಶರಾಗಬೇಡಿ. ಹಣದ ಜೊತೆ ಕೌಶಲ್ಯ ಕೊಟ್ಟು ದೇಶ-ವಿದೇಶಗಳಲ್ಲಿ ಉದ್ಯೋಗಾವಕಾಶ ಕೊಡಿಸುವ ಕೆಲಸ ಮಾಡಲಿದ್ದೇವೆ. ಯುವಕರ ಭವಿಷ್ಯ ನಿರ್ಮಾಣ ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

Leave a Reply