ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಛಲವಾದಿ ನಾರಾಯಣಸ್ವಾಮಿ

2 years ago

ಬೆಂಗಳೂರು: ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರನ್ನು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಅವಹೇಳನಕಾರಿಯಾಗಿ ನಿಂದಿಸುತ್ತಿದ್ಧಾರೆ ಎಂದು ಆರೋಪಿಸಿ ಅವರು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜಧಾನಿ ಬೆಂಗಳೂರು, ಮಂಗಳೂರು, ರಾಮನಗರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿಸಿದ ಪರಿಶಿಷ್ಟ ಸಮುದಾಯಕ್ಕೆ ಸೇರಿದ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಹೆಸರಲ್ಲಿ ಕಾಂಗ್ರೆಸ್ ನಾಯಕರು ಅವರನ್ನು ಅವಹೇಳನಕಾರಿಯಾಗಿ ನಿಂದಿಸುವ ಮೂಲಕ ತಾವು ದಲಿತ ವಿರೋಧಿಗಳು ಎಂದು ಸಾಬೀತುಪಡಿಸಿದ್ದಾರೆ ಇಂಥವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು  ಪ್ರತಿಭಟನಾ ನಿರತರು ಒತ್ತಾಯಿಸಿದರು.

ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕಾನೂನು ಉಲ್ಲಂಘಿಸಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರು ನಿವೇಶನವನ್ನು ಪಡೆದುಕೊಂಡಿದ್ದಾರೆ. ಕಾನೂನು ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿರುವುದರಿಂದ ರಾಜ್ಯಪಾಲರು ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಅದನ್ನು ಕೊಟ್ಟಿದ್ದೇ ತಪ್ಪು ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.

ರಾಜ್ಯಪಾಲರು ಕಾನೂನು ತಜ್ಞರ ಸಲಹೆ ಪಡೆದುಕೊಂಡೇ ಇಂತಹ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ನೀಡುವ ಮುನ್ನ ಸಾಕಷ್ಟು ಬಾರಿ ಕಾನೂನು ಅಭಿಪ್ರಾಯ ಪಡೆಯಲಾಗುತ್ತದೆ. ಒಂದು ವೇಳೆ ರಾಜ್ಯಪಾಲರ ತೀರ್ಮಾನ ಸರಿ ಇಲ್ಲ ಎಂದು ಕಂಡುಬಂದರೆ ಸರ್ಕಾರ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ಅದನ್ನು ಬಿಟ್ಟು ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರ ವಿರುದ್ಧ ಅವಮಾನಕಾರಿ ರೀತಿಯಲ್ಲಿ ಟೀಕೆ ಮಾಡುವುದು ಸರಿಯಲ್ಲ ಎಂದು ಪ್ರತಿಭಟನಾ ನಿರತರು ಕಿಡಿಕಾರಿದರು.

ರಾಜ್ಯಪಾಲರು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ಸಚಿವ ಜಮೀರ್‌ ಅಹಮದ್‌ ಹಾಗೂ ವಿಧಾನಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಅವರು ನಾಲಗೆ ಹರಿಬಿಟ್ಟು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಕೂಡಲೇ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಆರೋಪಿ ಸ್ಥಾನದಲ್ಲಿರುವ ಸ್ದಿರಾಮಯ್ಯನವರು ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಅಧಿಕಾರದಲ್ಲಿ ಮುಂದುವರೆದರೆ ನಿಷ್ಪಕ್ಷಪಾತ ಮತ್ತು ನ್ಯಾಯಯುತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ. ಆರೋಪಿ ಸ್ಥಾನದಲ್ಲಿ ಇರುವವರೇ ಉನ್ನತ ಸ್ಥಾನದಲ್ಲಿರುವಾಗ ತನಿಖಾಧಿಕಾರಿಗಳು ಮುಕ್ತವಾಗಿ ತನಿಖೆ ನಡೆಸಲು ಹೇಗೆ ಸಾಧ್ಯ. ಮೊದಲು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ನಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಮುಂದುವರೆಯುತ್ತದೆ. ಈ ಪ್ರಕರಣವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವವರೆಗೂ ವಿರಮಿಸುವುದಿಲ್ಲ ಎಂದರು.

Leave a Reply