ಬೆಂಗಳೂರು: ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಕೇಂದ್ರದ ವಿವಿಧ ಯೋಜನೆಗಳಿಗೆ ಶೀಘ್ರ ಅನುಮತಿ ಮತ್ತು ಜಿ ಎಸ್ ಟಿ ಕಾಯ್ದೆ ಅನ್ವಯ ರಾಜ್ಯಕ್ಕೆ ಬರಬೇಕಾಗಿರುವ ತೆರಿಗೆ ಬಾಕಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.
ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುತ್ತಿದ್ದು, ಮಹಾದಾಯಿ ಮತ್ತು ಮೇಕೆದಾಟು ಯೋಜನೆಗಳ ಕಾಮಗಾರಿ ಆರಂಭಕ್ಕೆ ಅನುಮತಿ ಹಾಗೂ ಆರ್ಥಿಕ ನೆರವು ನೀಡುವಂತೆ ಮನವಿ ಸಲ್ಲಿಸಲಿದ್ದಾರೆ.
ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ದೆಹಲಿಗೆ ತೆರಳುತ್ತಿರುವ ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಅದೇ ದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ.




