ಕುತೂಹಲಕ್ಕೆ ಕಾರಣವಾದ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಭೇಟಿ

1 year ago

ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದು ವಿದ್ಯಮಾನಗಳು ಕುತೂಹಲಕ್ಕೆ ಕಾರಣವಾಗಿದೆ.

ಕಾಲುನೋವಿನ ಕಾರಣಕ್ಕೆ ಸುಮಾರು ನಾಲ್ಕು ತಿಂಗಳಿನಿಂದ ದೆಹಲಿ ಯಾತ್ರೆ ಮುಂದೂಡುತ್ತಾ ಬಂದಿದ್ದ ಸಿದ್ದರಾಮಯ್ಯ ಅವರು ಕರ್ನಾಟಕ ಭವನದ ನವೀಕೃತ ಕಟ್ಟಡ ಉದ್ಘಾಟನೆಗೆ ತೆರಳುತ್ತಿದ್ದು, ಈ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. 

ಮಾತುಕತೆಯ ಸಮಯದಲ್ಲಿ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ವಿಚಾರ ಪ್ರಮುಖವಾಗಿ ಚರ್ಚೆಯಾಗಲಿದೆ. ಇದೇ ಸಮಯದಲ್ಲಿ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಕುರಿತು ಚರ್ಚೆ ನಡೆಯಲಿದೆ. ಅಲ್ಲಿಯವರೆಗೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಬಾರದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದು, ಈ ಬಗ್ಗೆ ಕೂಡ ಚರ್ಚೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬೇಡ ಎಂಬ ವಾದ ಮಂಡಿಸುತ್ತಿರುವ ಸಿದ್ದರಾಮಯ್ಯ ಸದ್ಯಕ್ಕೆ ಖಾಲಿ ಇರುವ ಒಂದು ಸ್ಥಾನ ಭರ್ತಿಗೆ ಮಾತ್ರ ಆಸಕ್ತಿ ಹೊಂದಿದ್ದಾರೆ. ವಾಲ್ಮೀಕಿ ಹಗರಣದ ಹಿನ್ನೆಲೆಯಲ್ಲಿ ನಾಗೇಂದ್ರ ರಾಜೀನಾಮೆ ನೀಡಿದ್ದು, ಆ ಸ್ಥಾನಕ್ಕೆ ಅವರನ್ನು ಮರಳಿ ನೇಮಿಸಲು ಒಲವು ಹೊಂದಿದ್ದು, ಇದಕ್ಕೆ ಹೈಕಮಾಂಡ್ ಒಪ್ಪಿಗೆ ಪಡೆಯಲಿದ್ದಾರೆ.

ಇದನ್ನು ಹೊರತುಪಡಿಸಿ ಜಾತಿವಾರು ಜನಗಣತಿ ಕುರಿತ ಕಾಂತರಾಜು ಆಯೋಗದ ವರದಿ ಅನುಷ್ಠಾನ ಕುರಿತು ರಾಹುಲ್ ಗಾಂಧಿ ಅವರ ಜೊತೆ ಪ್ರತ್ಯೇಕವಾಗಿ ಮಾತನಾಡಲಿರುವ ಸಿದ್ದರಾಮಯ್ಯ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ತಮ್ಮನ್ನು ಸೇರ್ಪಡೆ ಮಾಡುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯ ಸೇರಿದಂತೆ ಹಲವು ಪ್ರಭಾವಿ ಸಮುದಾಯಗಳು ಒತ್ತಡ ಏರುತ್ತಿವೆ. ಹಿಂದುಳಿದ ಸಮುದಾಯಕ್ಕೆ ಸೇರಿದ ಕೆಲವು ಜಾತಿಗಳು ತಮ್ಮ ಮೀಸಲಾತಿಯ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಮಂಡಿಸುತ್ತಿವೆ. ಈಗ ಇರುವ ಶೇಕಡ 50ರ ಮೀಸಲಾತಿ ಮಿತಿಯಲ್ಲಿ ಇದನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂತರಾಜು ಆಯೋಗದ ವರದಿಯ ಶಿಫಾರಸುಗಳನ್ನು ಆಧರಿಸಿ ಈ ಮೀಸಲಾತಿಯ ಪ್ರಮಾಣವನ್ನು ಶೇಕಡ 75 ಕ್ಕೆ ಹೆಚ್ಚಳ ಮಾಡಲು ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಯಾವ ರೀತಿಯ ನಡೆಸಬೇಕು ಎಂಬ ಕುರಿತು ಚರ್ಚಿಸುವ ಸಾಧ್ಯತೆ ಇದೆ.

Leave a Reply