ಬೆಂಗಳೂರು: ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ BJP Karnataka ಸರ್ಕಾರದ ಭ್ರಷ್ಟ ಕಣ್ಣು ಬಿದ್ದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಪ್ರತಿ ವಿದ್ಯಾರ್ಥಿಗಳಿಂದ ಮಾಸಿಕ ನೂರು ರೂ. ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಇದು ವಿವಾದಕ್ಕೀಡಾಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕಮಿಷನ್ ಹೆಸರಲ್ಲಿ ರಾಜ್ಯದ ಖಜಾನೆ ಲೂಟಿ ಆಯಿತು, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ..! ಬಿಜೆಪಿ ಸರ್ಕಾರಕ್ಕೆ ಇಂಥಾ ದೈನೇಸಿ ಸ್ಥಿತಿ ಬರಬಾರದಿತ್ತು ಎಂದಿದ್ದಾರೆ.
ವಿದ್ಯಾರ್ಥಿಗಳಿಗೆ ಹಾಲು, ಬಿಸಿ ಊಟ, ಸಮವಸ್ತ್ರ-ಶೂ, ವಿದ್ಯಾಸಿರಿ, ಹಾಸ್ಟೆಲ್ ಸೌಲಭ್ಯಗಳನ್ನು ನೀಡಿದ್ದು ನಾವು. ಅವರಿಂದ ಒಂದೊಂದನ್ನೇ ಕಿತ್ತುಕೊಳ್ಳುತ್ತಿರುವ ಸರ್ಕಾರ ಈಗ ಅವರಿಂದ ದುಡ್ಡುಕಿತ್ತುಕೊಳ್ಳಲು ಹೊರಟಿದೆ ಎಂದಿದ್ದಾರೆ.
ವೇದಿಕೆ ಮೇಲೆ ನಿಂತು ಧಮ್, ತಾಕತ್ ಎಂದು ಬೊಬ್ಬಿರಿಯುವವರು ವಿದ್ಯಾರ್ಥಿಗಳ ನೆರವಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿ ತಮ್ಮ ತಾಕತ್ ತೋರಿಸಲಿ ಎಂದು ಸವಾಲೊಡ್ಡಿದ್ದಾರೆ.
ನಮ್ಮ ಸರ್ಕಾರ ವಿದ್ಯಾಸಿರಿ, ಅರಿವು, ಶೂ ಭಾಗ್ಯ ವಿದೇಶಿ ವ್ಯಾಸಂಗಕ್ಕೆ ಆರ್ಥಿಕ ನೆರವು, ಶೈಕ್ಷಣಿಕ ಸಾಲ ಯೋಜನೆ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕು ನೀಡಿದರೆ, ಈಗಿನ ಬಿಜೆಪಿ ಸರ್ಕಾರ ಓದುವ ಮಕ್ಕಳಿಗೆ ತ್ರಿಶೂಲ ದೀಕ್ಷೆ ನೀಡಿ ಅವರ ಬದುಕನ್ನು ಕತ್ತಲಿಗೆ ದೂಡುತ್ತಿದೆ ಎಂದಿದ್ದಾರೆ.
ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪೋಷಕರಿಂದ ಹಣ ಸಂಗ್ರಹಿಸುವಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು ಮತ್ತು ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಎಲ್ಲಾ ಶೈಕ್ಷಣಿಕ ಯೋಜನೆಗಳಿಗೆ ಪುನರ್ ಚಾಲನೆ ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇನ್ನು ಈ ಕುರಿತು ತಕರಾರು ತೆಗೆದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಖರ್ಚು ವೆಚ್ಚಗಳನ್ನು ಸರಿದೂಗಿಸಲು ಸರ್ಕಾರಿ ಶಾಲೆ ಮಕ್ಕಳು ಪ್ರತಿ ತಿಂಗಳು ಪೋಷಕರಿಂದ ₹100 ಸಂಗ್ರಹಿಸಿ ಶಾಲಾಭಿವೃದ್ಧಿ – ಮೇಲುಸ್ತುವಾರಿ ಸಮಿತಿಗಳಿಗೆ ನೀಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯು ಅನ್ಯಾಯದ ಪರಮಾವಧಿ. ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆಗಳನ್ನು ನಡೆಸುವ ಯೋಗ್ಯತೆ ಇಲ್ಲ ಎಂಬುದನ್ನು ಈ ನಿರ್ಧಾರ ದೃಢಪಡಿಸಿದೆ ಎಂದಿದ್ದಾರೆ.
ಕೋವಿಡ್ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಸಾವಿರಾರು ಸರ್ಕಾರಿ ಶಾಲೆಗಳು ದುಸ್ಥಿತಿಯಲ್ಲಿದ್ದು, ಪೋಷಕರು ಆರ್ಥಿಕ ಸಂಕಷ್ಟದಲ್ಲಿರುವಾಗ ಶಾಲೆಯ ಖರ್ಚು ವೆಚ್ಚಗಳನ್ನು ಅವರ ಮೇಲೆ ಹೊರಿಸುವುದು ಯಾವ ನ್ಯಾಯ? ಸಂವಿಧಾನ ವಿಧಿ 21ಎ ಹಾಗೂ ಶಿಕ್ಷಣದ ಹಕ್ಕಿನ ನಿಯಮಗಳನ್ನೂ ಉಲ್ಲಂಘಿಸಿ ಈ ರೀತಿಯ ಅವೈಜ್ಞಾನಿಕ ನಿರ್ಧಾರ ಹೊರಡಿಸಿರುವುದು ಸರಿಯಲ್ಲ ಎಂದಿದ್ದಾರೆ.
ಸರ್ಕಾರ ಹೊರಡಿಸಿರುವ ಸುತ್ತೋಲೆಯು ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಿಸುವ ಒಂದು ಹುನ್ನಾರ. ಸರ್ಕಾರಿ ಶಾಲೆ ಮಕ್ಕಳಿಗೆ ಅನ್ಯಾಯವಾಗುವುದನ್ನು ಕಾಂಗ್ರೆಸ್ ಪಕ್ಷವು ಎಂದಿಗೂ ಸಹಿಸುವುದಿಲ್ಲ. 2023ಕ್ಕೆ ಅಧಿಕಾರಕ್ಕೆ ಬಂದನಂತರ ಇಂಥ ಶಿಕ್ಷಣ ವಿರೋಧಿ ನೀತಿಗಳನ್ನು ಹಿಂಪಡೆಯುತ್ತೇವೆ ಎಂದಿದ್ದಾರೆ.
Chief Minister of Karnataka B C Nagesh Tiptur



