ಬೆಂಗಳೂರು: ವಾಲ್ಮೀಕಿ ಪ್ರತಿಮೆ ಅನಾವರಣ ಸಮಾರಂಭದ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗುಂಪು ಘರ್ಷಣೆ, ಗೋಲಿಬಾರ್‌ನಿಂದ ಪ್ರಕ್ಷುಬ್ಧಗೊಂಡಿದ್ದ ಬಳ್ಳಾರಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೂ ಬೂದಿ ಮುಚ್ಚಿದ ಕೆಂಡದಂತ ವಾತಾವರಣ ಇದ್ದು ಮುಂಜಾಗ್ರತಾ ಕ್ರಮವಾಗಿ ನಗರಾದ್ಯಂತ ಹೆಚ್ಚಿನ ಪೊಲೀಸ್ ಪಡೆಯನ್ನು ಬಂದೋಬಸ್ತ್‌ಗೆ ನಿಯೋಜಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಜನಾರ್ದನರೆಡ್ಡಿ ಅವರ ಬೆಂಬಲಿಗರ ನಡುವೆ ಗುಂಪು ಘರ್ಷಣೆ ನಡೆದು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಜತೆಗೆ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಅಂಗ ರಕ್ಷಕರು ಗುಂಡು ಹಾರಿಸಿದ್ದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.
ಈ ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಎಂಬುವರು ಬಲಿಯಾಗಿದ್ದರು. ಇದರಿಂದ ಇಡೀ ಬಳ್ಳಾರಿ ನಗರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ತಕ್ಷಣ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿ ಪರಿಸ್ಥಿತಿಯನ್ನು ಸಹಬದಿಗೆ ತಂದಿದ್ದರು. ಇಂದು ಬಳ್ಳಾರಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದೆ. ಐಜಿಪಿ ರವಿಕಾಂತೇಗೌಡ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಬಂದೋ ಬಸ್ತ್‌ನ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.
ಗುಂಪು ಘರ್ಷಣೆ ಗೋಲಿಬಾರ್‌ನಲ್ಲಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿಗೂ ತೀವ್ರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆ ತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಡಿನೇಟಿನಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರರೆಡ್ಡಿ ಶವ ಪರೀಕ್ಷೆ ಬಳ್ಳಾರಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆಸಿದ ನಂತರ ಮೃತ ದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದರು. ನಂತರ ಮೆರವಣಿಗೆ ಮೂಲಕ ಮೃತದೇಹವನ್ನು ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಶಾಸಕ ಭರತ್ ರೆಡ್ಡಿ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಗುಂಪು-ಘರ್ಷಣೆ ಸಂಬಂಧಿಸಿದಂತೆ ಶಾಸಕ ಜನಾರ್ದನರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಮಾಜಿ ಶಾಸಕ ಸೋಮಶೇಖರೆಡ್ಡಿ ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನರೆಡ್ಡಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಚಾನಾಳ್ ಶೇಖರ್ ನೀಡಿರುವ ದೂರು ಆಧರಿಸಿ ಜನಾರ್ದನರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಜನಾರ್ದನರೆಡ್ಡಿ ಅವರನ್ನು ಒಂದನೇ ಆರೋಪಿ ಎಂದು ಮಾಡಲಾಗಿದೆ. ಜನಾರ್ದನರೆಡ್ಡಿ ಸಹೋದರ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಎರಡನೇ ಆರೋಪಿ, ಮಾಜಿ ಸಚಿವ ಶ್ರೀರಾಮುಲು ಮೂರನೇ ಆರೋಪಿಯಾಗಿದ್ದಾರೆ. ಬಳ್ಳಾರಿಯ ಪಾಲಿಕೆಯ ವಿರೋಧ ಪಕ್ಷದ ನಾಯಕ ಮೋದತ್ಕರ್ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಗೋಲಿಬಾರ್‌ನಲ್ಲಿ ಮೃತಪಟ್ಟ ಕಾಂಗ್ರೆಸ್ ಶಾಸಕ ರಾಜಶೇಖರ್ ರೆಡ್ಡಿ ಅವರ ದೇಹ ಹೊಕ್ಕಿರುವುದು ಪೊಲೀಸ್ ಬುಲೆಟ್ ಅಲ್ಲ ಎಂದು ಬಳ್ಳಾರಿ ಎಸ್.ಪಿ. ರಂಜಿತ್‌ಕುಮಾರ್ ಬಂಡಾರು ಸ್ಪಷ್ಟಪಡಿಸಿದ್ದಾರೆ. ಮೃತ ಕಾಂಗ್ರೆಸ್ ಕಾರ್ಯಕರ್ತನ ದೇಹದಲ್ಲಿರುವುದು ಖಾಸಗಿ ವ್ಯಕ್ತಿಯ ರಿವಾಲ್ವರ್ ಬುಲೆಟ್. ಪೊಲೀಸರು ಗಾಳಿಯಲ್ಲಿ ಹಾರಿಸಿರುವ ಗುಂಡು ಅವರ ದೇಹ ಹೊಕ್ಕಿಲ್ಲ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಸಮಗ್ರ ತನಿಖೆ ನಡೆಸಲಾಗುವುದು. ಸಿಸಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದೇವೆ. ಘಟನೆಗೆ ಸಂಬಂಧಿಸಿದಂತೆ ನಾರಾ ಭರತ್ ರೆಡ್ಡಿ ಬೆಂಬಲಿಗರು ದೂರು ನೀಡಿದ್ದಾರೆ. ಖಾಸಗಿ ವ್ಯಕ್ತಿ ಗುಂಡು ಹಾರಿಸಿರುವ ಬಗ್ಗೆಯೂ ತನಿಖೆ ನಡೆದಿದೆ ಎಂದರು.




