ಬೆಂಗಳೂರು: ನಾಡಿನ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಪದ್ಮಭೂಷಣ ಡಾ. ಎಸ್.ಎಲ್ ಭೈರಪ್ಪ ಅವರು ನಿಧನರಾಗಿದ್ದಾರೆ. 94 ವರ್ಷದ ಭೈರಪ್ಪ ಅವರು ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ತನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಇವರ ಮೃತ ದೇಹವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದ್ದು, ಆನಂತರ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಪರ್ವ, ತಬ್ಬಲಿ ನೀನಾದೆ ಮಗನೆ, ವಂಶವೃಕ್ಷ, ದಾಟು, ತಂತು ಮುಂತಾದ ಕಾದಂಬರಿಗಳು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಇವರ ಬಹುತೇಕ ಎಲ್ಲ ಕಾದಂಬರಿಗಳು ಹಲವಾರು ಮರು ಮುದ್ರಣ ಕಂಡಿದ್ದು, ಹಿಂದಿ, ಇಂಗ್ಲೀಷ್ ಸೇರಿದಂತೆ ಬಹುತೇಕಾಗಿ ಎಲ್ಲ ಭಾರತೀಯ ಭಾಷೆಗಳಿಗೆ ಅನುವಾದಗೊಂಡಿವೆ. ಅನೇಕ ಕಾದಂಬರಿಗಳು ಸಿನಿಮಾ ಕೂಡ ಆಗಿವೆ.
ಭೈರಪ್ಪನವರು ಕಾದಂಬರಿಗಳ ಜೊತೆಗೆ ಸೌಂದರ್ಯ ಮೀಮಾಂಸೆಯ ಕುರಿತು ಹಲವು ಗ್ರಂಥಗಳನ್ನು ರಚಿಸಿದ್ದಾರೆ. ವಂಶ ವೃಕ್ಷ, ನಾಯಿ ನೆರಳು, ಪರ್ವ, ಗೃಹಭಂಗ, ಗ್ರಹಣ, ಉತ್ತರಾಖಂಡ ಸೇರಿದಂತೆ 25 ಕಾದಂಬರಿಗಳನ್ನು ಬರೆದಿರುವ ಭೈರಪ್ಪನವರು, ಪದ್ಮಭೂಷಣ, ನಾಡೋಜ ಪ್ರಶಸ್ತಿ, ಪಂಪ ಪ್ರಶಸ್ತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿಗಳು ಇವರಿಗೆ ಸಂದಿವೆ.
ಭೈರಪ್ಪ ಅವರು ಅವರು 1931 ಆಗಸ್ಟ್ 20 ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ ಜನಿಸಿದ್ದರು. ಎಸ್.ಎಲ್. ಭೈರಪ್ಪನವರು ಲಿಂಗಣ್ಣಯ್ಯ ಮತ್ತು ಗೌರಮ್ಮ ದಂಪತಿಗಳ ಪುತ್ರ. ಅವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರಿನ ಸುತ್ತಮುತ್ತಲಿನ ಶಾಲೆಗಳಲ್ಲಿ ಮುಗಿಸಿದರು. ನಂತರ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿದರು. ಮಹಾರಾಜ ಕಾಲೇಜಿನಲ್ಲಿ ಬಿ.ಎ., ಪದವಿ ಪಡೆದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ., ಪದವಿಯನ್ನು ಸಹ ಪಡೆದರು.
ಗತಜನ್ಮದಿಂದ ಆರಂಭಗೊಂಡು ಉತ್ತಕಾಂಡದವರೆಗೂ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು 25ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿದ್ದಾರೆ. ಇವುಗಳಲ್ಲಿ ಹಲವು ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಬಂಗಾಳಿ ಸಹಿತ ಹಲವು ಭಾಷೆಗಳಿಗೆ ಅನುವಾದಗೊಂಡಿವೆ. ಅದರಲ್ಲೂ ಭೈರಪ್ಪ ಅವರ ಒಂದೊಂದು ಕಾದಂಬರಿಯೂ ಹಲವು ಮುದ್ರಣಗಳನ್ನು ಕಂಡು ದಾಖಲೆಗಳನ್ನು ಬರೆದಿವೆ.
ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿದೇವೇಗೌಡ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
‘ನಮ್ಮ ಆತ್ಮಸಾಕ್ಷಿಯನ್ನು ಕಲಕಿದ ಮತ್ತು ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಎಸ್.ಎಲ್. ಭೈರಪ್ಪ ಅವರು ನಿರ್ಭೀತ ಹಾಗೂ ಮಹಾನ್ ಚಿಂತಕ. ಅವರ ಬರವಣಿಗೆಯ ಮೂಲಕ ಕನ್ನಡ ಸಾಹಿತ್ಯವನ್ನು ಸಮೃದ್ದಿಗೊಳಿಸಿದ್ದರು. ಅವರ ಬರಹಗಳು ಸಮಾಜದ ಕುರಿತು ಚಿಂತಿಸಲು, ಪ್ರಶ್ನಿಸಲು ಒಂದು ಪೀಳಿಗೆಗೆ ಪ್ರೇರಣೆ ನೀಡಿದವು. ಇತಿಹಾಸ ಹಾಗೂ ಸಂಸ್ಕೃತಿಯ ಕುರಿತು ಅವರಿಗಿದ್ದ ಒಲವು ಮುಂದಿನ ತಲೆಮಾರಿಗೂ ಮಾದರಿಯಾಗಲಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡ ಸಾಹಿತ್ಯ ಲೋಕದ ಮೇರು ಲೇಖಕ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ, ಪದ್ಮಭೂಷಣ ಡಾ. ಎಸ್.ಎಲ್. ಭೈರಪ್ಪರವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಉತ್ಕೃಷ್ಟ ಕಾದಂಬರಿಗಳ ನೀಡಿ, ಲಕ್ಷಾಂತರ ಓದುಗರ ಮನಗೆದ್ದಿದ್ದ, ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.



