ಒಂದೊಂದು ಸಲ ಏಕಾದರೂ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದೇನೆ ಎನಿಸಿದೆ: ಬಸವರಾಜ ಹೊರಟ್ಟಿ

1 year ago

ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಬಿಜೆಪಿಯ ಸಿ.ಟಿ. ರವಿ ಅವರ ನಡುವಿನ ವಿವಾದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪೋಟಕ ತಿರುವು ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ವಿದ್ಯಮಾನಗಳ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿಯ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿ ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದರು.

ಈ ಕುರಿತಾಗಿ ಯಾವುದೇ ಆಡಿಯೋ ರೆಕಾರ್ಡ್ ಆಗಿಲ್ಲ. ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ವರು ಸದಸ್ಯರು ಸಾಕ್ಷಿ ಹೇಳಿದ್ದಾರೆ. ಸಿ ಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರೂ ನೀಡಿರುವ ದೂರನ್ನೂ ಪಡೆದಿದ್ದೇನೆ. ಅದನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್ ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ನಡೆಯಿತು. ಇದರಿಂದ ಕಲಾಪ ಮುಂದೂಡಿದೆ. ಕಲಾಪ ಮುಂದೂಡುತ್ತಿದ್ದಂತೆ ಕ್ಯಾಮರಾಗಳನ್ನು ಆಫ್ ಮಾಡಲಾಯಿತು. ನಂತರ  ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿ ಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ನನಗೆ ಬಂದಿದೆ ಎಂದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ ಟಿ ರವಿ ಅವರನ್ನು ಕರೆದು ಮಾತನಾಡಿದೆ. ಇದನ್ನು ಇಲ್ಲಿಗೆ ಮುಗಿಸೋಣ ಎಂದು ಸಲಹೆ ನೀಡಿದೆ. ನಾನು ಹತಾಶರಾಗಿದ್ದಾರೆ ಎಂದಿದ್ದೇನೆ. ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಎಂದು ಸಿಟಿ ರವಿ ಅವರು ಹೇಳಿದರು ಎಂದು ಬಸವರಾಜ ಹೊರಟ್ಟಿ ಹೇಳಿದರು.

ತಮ್ಮ ಸುದೀರ್ಘ 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಏಕಾದರೂ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದೇನೆ ಎನಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ನಾನು ಯಾರ ಪರವೂ ಇಲ್ಲ,ವಿರುದ್ಧವೂ ಅಲ್ಲ. ಎರಡೂ ಕಡೆ ಯೋಚನೆ ಮಾಡಿದ್ದೇನೆ. ಇದು ಕಡ್ಡಿ ಹೋಗಿ ಗುಡ್ಡ ಆಯ್ತು. ಬೇಲಿಯೇ ಎದ್ದು ಹೊಲ ಮೇಯ್ದರೇ ಏನಾಗತ್ತೆ. ಜನ ನಮ್ಮನ್ನು ನೋಡುತ್ತಾರೆ. ಶಾಸಕರು ನಡುವಳಿಕೆ ತಿದ್ದುಕೊಳ್ಳಬೇಕು ಎಂದರು.

Leave a Reply