ನಿರ್ಮಲ ಸೀತಾರಾಮನ್ ನಾಮಫಲಕಕ್ಕೆ ಮಸಿ

2 years ago

ಬೆಂಗಳೂರು: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕೈಗೊಳ್ಳಲು ಆರ್ಥಿಕ ನೆರವು ಮತ್ತು ಬಜೆಟ್ ನಲ್ಲಿ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಅವರ ಕಚೇರಿ ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂತ್ರಿಗಳು ಮತ್ತು ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿ ಧರಣಿ ನಡೆಸಿದ ಬೆನ್ನೆಲ್ಲೇ, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಅದರಲ್ಲೂ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಂತೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಕೇಂದ್ರ ಸರ್ಕಾರ ಯಾವುದೇ ರೀತಿಯ ತಾರತಮ್ಯ ಮಾಡುತ್ತಿಲ್ಲ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ನಿರ್ಮಲ ಸೀತಾರಾಮನ್ ಅವರ ಕಚೇರಿ ಮುಂದೆ ಕೆಲಕಾಲ ಧರಣಿ ನಡೆಸಿದ ಎನ್.ಎಸ್.ಯು.ಐ. ಕಾರ್ಯಕರ್ತರು ರಾಜ್ಯದಿಂದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕದ ವಿರುದ್ಧ ನಿಲುವು ಹೊಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಒಮ್ಮೆಯೂ ದನಿ ಎತ್ತದ ಈ ಸಚಿವರು ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ ಕಚೇರಿ ಮುಂಭಾಗದಲ್ಲಿ ಅಳವಡಿಸಲಾಗಿದ್ದ ನಿರ್ಮಲಾ ಸೀತಾರಾಮನ್ ಹೆಸರಿನ ನಾಮಫಲಕ್ಕೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಮಸಿ ಬಳಿದ ಆರೋಪದಲ್ಲಿ ಕಾರ್ಯಕರ್ತರಾದ ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಎಂಬುವವರನ್ನು ವಶಕ್ಕೆ ಪಡೆದು, ಪ್ರತಿಭಟನಾಕಾರರನ್ನು ಚದುರಿಸಿದರು.

Leave a Reply