ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ನಮ್ಮನ್ನು ಬಿಡುಗಡೆ ಮಾಡಲು ನಿರ್ದೇಶಿಸಬೇಕು ಎಂದು ಕೋರಿ ಆರ್‌ಸಿಬಿ ಮತ್ತು ಡಿಎನ್‌ಎ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಬಿಡುಗಡೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಪರ ಅವರ ಪತ್ನಿ ಮಾಳವಿಕಾ ನಾಯಕ್, ಮೆಸರ್ಸ್ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಆರ್.ಸುನಿಲ್ ಮ್ಯಾಥ್ಯೂ ಪರವಾಗಿ ಅವರ ಪತ್ನಿ ರೋಶನಿ ಸುನಿಲ್, ಎಸ್.ಕಿರಣ್ ಕುಮಾರ್ ಪರವಾಗಿ ಅವರ ಪತ್ನಿ ಕೆ.ನಂದಿನಿ ಮತ್ತು ಎನ್.ಪಿ.ಶಮಂತ್ ಅವರ ತಾಯಿ ನಿರ್ಮಲಾ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ಸಂಬಂಧ ಬುಧವಾರ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಪ್ರಕಟಿಸಿದರು. ಅರ್ಜಿದಾರರು ತಮ್ಮ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ನ್ಯಾಯಪೀಠ ಷರತ್ತು ವಿಧಿಸಿದೆ.
ಈ ನಡುವೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲೆಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಂದುವರೆಸಿದ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ವಿಭಾಗೀಯ ಪೀಠ, ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿರುವ ಪ್ರಕರಣ ಕುರಿತ ನಡೆಸಿರುವ ಎಲ್ಲ ರೀತಿಯ ಸಂವಹನದ ದಾಖಲೆಗಳನ್ನು ಮುಖ್ಯ ಕಾರ್ಯದರ್ಶಿಗಳ ವಶದಲ್ಲಿಡುವಂತೆ ಸೂಚಿಸಿದೆ.
ವಿಚಾರಣೆ ಸಂದರ್ಭದಲ್ಲಿಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಘಟನೆಗೆ ಸಂಬಂಧಿಸಿದಂತೆ ಈವರೆಗೂ ನಡೆದ ತನಿಖೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿ ಮತ್ತು ಕೈಗೊಂಡ ಕ್ರಮಕ್ಕೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ಪೀಠಕ್ಕೆ ಸಲ್ಲಿಸಿದರು.
ಘಟನೆ ಸಂಬಂಧ ಸರ್ಕಾರ ಮ್ಯಾಜಿಸ್ಟ್ರಿಯಲ್ ತನಿಖೆಗೆ ವಹಿಸಿದೆ. ಮತ್ತೊಂದೆಡೆ ನ್ಯಾಯಾಂಗ ತನಿಖೆಗೂ ಕೋರಿದೆ. ಈ ಎರಡೂ ತನಿಖೆಗಳಲ್ಲಿ ಬೇರೆ ಬೇರೆ ರೀತಿಯ ಅಭಿಪ್ರಾಯ ಬಂದರೆ ಯಾವ ಕ್ರಮಕ್ಕೆ ಮುಂದಾಗುತ್ತೀರಿ ಎಂದು ಅಡ್ವೋಕೇಟ್ ಜನರಲ್ ಅವರನ್ನು ಪ್ರಶ್ನಿಸಿದ ಪೀಠ, ಇದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗುತ್ತದೆ ಎಂದು ಪೀಠ ಎಚ್ಚರಿಕೆ ನೀಡಿತು.
ಈ ವೇಳೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಅರ್ಜಿಯೊಂದಿಗೆ ಬೇರೆಯವರನ್ನು ಪ್ರತಿವಾದಿಗಳನ್ನಾಗಿ ಮಾಡಬೇಕೇ ಎಂದು ಪೀಠ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಅಡ್ವೋಕೇಟ್ ಜನರಲ್, ನ್ಯಾಯಾಂಗ ತನಿಖೆ ವರದಿ ಬಂದ ಬಳಿಕ ಈ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಬಹುದು ಎಂದರು.
ಈ ರೀತಿಯ ಕಾರ್ಯಕ್ರಮಗಳ ಆಯೋಜನೆಗೆ ಎಸ್‌ಒಪಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಶಿಕಿರಣ್ ಶೆಟ್ಟಿ ಇದೇ ವೇಳೆ ಪೀಠಕ್ಕೆ ಭರವಸೆ ನೀಡಿದರು. ವಿಚಾರಣೆ ವೇಳೆ ಮಧ್ಯಪ್ರವೇಶಿಸಿದ ವಕೀಲರೊಬ್ಬರು, ಮೃತರ ಸಂಬಂಧಿಕರಿಗೆ ಪರಿಹಾರ ಮೊತ್ತ ಹೆಚ್ಚಳ ಮಾಡಬೇಕು ಎಂದು ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಿದರು. ಅದಕ್ಕೆ ಉತ್ತರಿಸಿ ಅಡ್ವೋಕೇಟ್ ಜನರಲ್, ಈಗಾಗಲೇ ಮೃತರರ ಕುಟುಂಬಗಳಿಗೆ 25 ಲಕ್ಷ ರೂ.ಗಳ ಪರಿಹಾರವನ್ನು ನೀಡಿರುವುದಾಗಿ ತಿಳಿಸಿದರು.
ಈ ವೇಳೆ, ಪೊಲೀಸ್ ಅಧಿಕಾರಿಗಳನ್ನು ಯಾವುದೇ ರೀತಿ ವಿಚಾರಣೆ ಮಾಡದೆ ಏಕಾಏಕಿ ಸೇವೆಯಿಂದ ಅಮಾನತ್ತುಗೊಳಿಸಿರುವ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಮತ್ತೊಬ್ಬ ವಕೀಲರು ಮನವಿ ಮಾಡಿದರು. ಇದಕ್ಕೆ ಪೀಠ, ಅರ್ಜಿದಾರರಿಗೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದರಿಂದ ನಿಮ್ಮ ಹಿತಾಸಕ್ತಿ ಏನು ಎಂದು ಪ್ರಶ್ನಿಸಿ ಅರ್ಜಿಯನ್ನು ಪರಿಗಣಿಸಲಿಲ್ಲ. ವಾದ ಆಲಿಸಿದ ಪೀಠ, ಮುಂದಿನ ವಿಚಾರಣೆಯನ್ನು ಜೂನ್ 17ಕ್ಕೆ ಮುಂದೂಡಿದೆ.




