ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು: ಬಿಜೆಪಿ

2 years ago

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಬಗ್ಗೆ ಎನ್ಐಎ ತನಿಖೆ ನಡೆಯುತ್ತಿದೆ. ಆದರೆ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ ಈ ಪ್ರಕರಣಗಳನ್ನು ಹಿಂದೆ ಪಡೆದಿದ್ದು ಕಾನೂನು ಬಾಹಿರವಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಪ್ರಕರಣಗಳನ್ನು ವಾಪಸ್ ಪಡೆದಿರುವ ಕ್ರಮ ಖಂಡಿಸಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಪಕ್ಷ ರಾಜ್ಯಾಧ್ಯಕ್ಷ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆನಂತರ ನಿಯೋಗದಲ್ಲಿ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಹುಬ್ಬಳ್ಳಿ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ರಾಜ್ಯ ಸರ್ಕಾರ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಈ ಸರ್ಕಾರ ದೇಶ ವಿರೋಧಿ ಶಕ್ತಿಗಳನ್ನು ಬೆಂಬಲಿಸುತ್ತಿದೆ ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.

ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಮತ ಬ್ಯಾಂಕ್ ರಾಜಕಾರಣ ಮತ್ತು ಹಗರಣಗಳನ್ನು ಮರೆ ಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಮಾಡಿದ್ದಾರೆ ಎಂದರು.

ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿ ಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಮುಸ್ಲಿಂ ಓಟುಗಳನ್ನು ಗಟ್ಟಿ ಮಾಡಿಕೊಳ್ಳಲು ಹೀಗೆ ಮಾಡಲಾಗಿದೆ. ರೈತರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಮನವಿ ಮಾಡಿದ್ದರೂ ಅದಕ್ಕೆ ಸರ್ಕಾರ ಸ್ಪಂದಿಸಿಲ್ಲ ಎಂದರು.

ಹಿಂದೂಗಳು ತಾವು ಹಿಂದೂ ಎಂದ ತಕ್ಷಣ ನಿಮಗ್ಯಾಕೆ ಬೆಂಕಿ ಬೀಳುತ್ತದೆ. ಇದಕ್ಕೆ ಉತ್ತರ ಕೊಡಲು ಸಾಧ್ಯವೇ? ಕರ್ತವ್ಯ ನಿರತ ಪೊಲೀಸರ ಮೇಲೆ ಕಲ್ಲು ತೂರಿ ಗಾಯ ಮಾಡಿ ಆಸ್ಪತ್ರೆ ಸೇರುವಂತೆ ಮಾಡಿದವರ ಮೇಲಿನ ಕೇಸುಗಳನ್ನು ಹಿಂದಕ್ಕೆ ಪಡೆಯುತ್ತಿರುವುದು ಅಕ್ಷಮ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. 

ಇದಕ್ಕೂ ಮುನ್ನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆ ಯಲ್ಲಿ ಪಕ್ಷದ ವಿಜಯೇಂದ್ರ, ರಾಜ್ಯದಲ್ಲಿ ಹಿಂದೂ ವಿರೋಧಿ ಸರಕಾರವಿದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದರು.

ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ, ದಾಳಿ ಮಾಡಿದ್ದ, ಗಲಭೆ ಸೃಷ್ಟಿಸಿದ್ದ ದೇಶದ್ರೋಹಿಗಳ ಮೇಲಿನ ಕೇಸುಗಳನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಹಿಂದಕ್ಕೆ ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದ್ದು, ಅದನ್ನು ಉಳಿಸಿಕೊಳ್ಳಲು ಯಾವ ಮಟ್ಟಕ್ಕೆ ಹೋಗಲು ಕೂಡ ಕಾಂಗ್ರೆಸ್ ಸರಕಾರ ಹೇಸುವುದಿಲ್ಲ ಎಂದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ. ಅವರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿಯೇ ಇರುತ್ತಾರೆ ಎನ್ನುವುದನ್ನು ಮಲ್ಲಿಕಾರ್ಜುನ ಖರ್ಗೆ ಅವರಿಂದ ಹೇಳಿಸಲಿ ನೋಡೋಣ ಎಂದರು.

Leave a Reply