ಬೆಂಗಳೂರು: ಕಿತ್ತೂರು ಕರ್ನಾಟಕದ ಬೆಳಗಾವಿ ಜಿಲ್ಲೆಯ ಕಿತ್ತೂರಿನ ಬಹುದಿನದ ಬೇಡಿಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇಲ್ಲಿ ಹೊಸದಾಗಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸಭೆ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ಕಿತ್ತೂರಿನಲ್ಲಿ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು ರೂ.3378.65 ಲಕ್ಷಗಳ ಅನುದಾನದಲ್ಲಿ ನಿರ್ಮಿಸಲು ಹೊಸದಾಗಿ ಟೆಂಡರ್ ಆಹ್ವಾನಿಸಿ ಕೈಗೊಳ್ಳಲು ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿತು ಎಂದರು.
ಬೆಳಗಾವಿ ಜಿಲ್ಲೆಯ ನವಿಲುತೀರ್ಥ ಅಣೆಕಟ್ಟಿನಿಂದ ಮಲಪ್ರಭಾ ನದಿಯ ನೀರು ಎತ್ತುವ ಮೂಲಕ ರಾಮದುರ್ಗ ತಾಲ್ಲೂಕಿನ ಚಂದರಗಿ ಮತ್ತು ಸುತ್ತಮುತ್ತಲಿನ ಗ್ರಾಮಗಳ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.
ಮೊಳಕಾಲ್ಮೂರು ತಾಲ್ಲೂಕು ಗಣಿ ಬಾಧಿತ ಪ್ರದೇಶವಾಗಿರುವುದರಿಂದ ಈ ತಾಲ್ಲೂಕಿನಲ್ಲಿ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಪ್ರಸ್ತುತವಿರುವ 100 ಹಾಸಿಗೆ ತಾಲ್ಲೂಕು ಆಸ್ಪತ್ರೆಯನ್ನು 200 ಹಾಸಿಗೆಗಳಿಗೆ ಉನ್ನತೀಕರಿಸಿ ಪ್ರತ್ಯೇಕ ಜಿಲ್ಲಾಮಟ್ಟದ ಆಸ್ಪತ್ರೆಯನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದಿಸಿದೆ ಎಂದರು.
ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ಮುಸ್ಲಿಂಮೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಶೇ.50ರಷ್ಟು ಕಡ್ಡಾಯವಾಗಿ ಹೊಂದಿರಬೇಕೆಂಬ ನಿಯಮವನ್ನು ತೆಗೆದುಹಾಕಲು ಸಚಿವ ಸಂಪುಟ ನಿರ್ಣಯಿಸಿದೆ ಎಂದರು.
ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳು ಇಲಾಖೆಯನ್ನುಇಎಸ್ಐ ಮಾರ್ಗಸೂಚಿಗಳನ್ವಯ “ಸೊಸೈಟಿ ನೋಂದಣಿ ಕಾಯ್ದೆ 1860” ಅಡಿಯಲ್ಲಿ ನೋಂದಾಯಿಸಿ “ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಸೊಸೈಟಿ” ಯನ್ನಾಗಿ ರೂಪಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದರು.
ಹಾವೇರಿ ಜಿಲ್ಲೆ, ಹಾನಗಲ್ಲ ತಾಲ್ಲೂಕಿನ ವರದಾ ನದಿಯಿಂದ ನರೆಗಲ್ ಹಾಗೂ ಕುಸನೂರ ಏತ ನೀರಾವರಿ ಮುಖಾಂತರ 111 ಕೆರೆಗಳನ್ನು ತುಂಬಿಸುವ ಯೋಜನೆಯನ್ನು ರೂ.220.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದರು.
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಸೊಕನಾದಗಿ ಗ್ರಾಮ ಮತ್ತು ಸುತ್ತಮುತ್ತಲಿನ 588 ಹೆಕ್ಟೇರ್ ಕ್ಷೇತ್ರಕ್ಕೆ ಏತ ನೀರಾವರಿ ಯೋಜನೆಯ ಮೂಲಕ ನೀರಾವರಿ ಯೋಜನೆಯ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ರೂ.17.00 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಯನ್ನು ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದರು.
ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ವ್ಯತ್ಯಾಸದ ಮೊತ್ತ ರೂ.265.57 ಲಕ್ಷಗಳಂತೆ ಒಟ್ಟು 15 ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತ ರೂ.3983.55 ಲಕ್ಷಗಳ ಯೋಜನಾ ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ರೂ.87.60 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ ಎಂದರು.




