ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ನೇತೃತ್ವದ ಆಡಳಿತದ ಅವಧಿಯಲ್ಲಿ ಸ್ಥಾಪಿಸಲಾಗಿದ್ದ ನೂತನ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮೂಲಸೌಕರ್ಯ ಹಾಗೂ ವಿದ್ಯಾರ್ಥಿಗಳ ಕೊರತೆ ಹೆಸರಿನಲ್ಲಿ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರಕ್ಕೆ ತಾಕತ್ತಿದ್ದರೆ 9 ಬಾರ್ ಗಳನ್ನು ಮುಚ್ಚಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ ಸವಾಲು ಎಸೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಈ ಕಾರಣಕ್ಕೆ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದರು .
ರಾಜ್ಯದಲ್ಲಿ ಕಿಸಾನ್ ಸಮ್ಮಾನ್, ವಿದ್ಯಾನಿಧಿ ಸೇರಿದಂತೆ ಅನೇಕ ಯೋಜನೆಗಳನ್ನು ಮುಚ್ಚಿ ಹಾಕಲಾಗಿದೆ. ಈಗ ಮಾರಿ ಕಣ್ಣು ಹೋರಿ ಮೇಲೆ ಎಂಬಂತೆ, ಸಿದ್ದರಾಮಯ್ಯನವರ ಕಣ್ಣು ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುವಜನರು ಪದವೀಧರರಾಗುವುದನ್ನು ತಪ್ಪಿಸಲು ಈ ರೀತಿ ಮಾಡಲಾಗಿದೆ. ಯಾರೂ ಪದವೀಧರರಾಗದೇ ಇದ್ದಲ್ಲಿ ಯುವನಿಧಿ ಯೋಜನೆಯನ್ನು ನಿಲ್ಲಿಸಬಹುದು ಎಂಬುದು ಅವರ ಚಿಂತನೆ ಎಂದರು.
ಮಂಡ್ಯದ ವಿಶ್ವವಿದ್ಯಾಲಯವನ್ನು ಮುಚ್ಚಿ, ಮನೋರಂಜನಾ ಪಾರ್ಕ್ ಹಾಗೂ ಜಲಕ್ರೀಡೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಹೆಚ್ಚು ಕನ್ನಡಿಗರು ಇರುವ ಮಂಡ್ಯದಲ್ಲೇ ಶಿಕ್ಷಣಕ್ಕೆ ಕೊಡಲಿ ಪೆಟ್ಟು ಹಾಕಲಾಗಿದೆ. ಉಪನ್ಯಾಸಕರ ನೇಮಕವಿಲ್ಲ, ಅತಿಥಿ ಉಪನ್ಯಾಸರಿಗೆ ವೇತನ ಇಲ್ಲ, ಹೊಸ ಶಿಕ್ಷಣ ನೀತಿ ಜಾರಿಯಾಗಿಲ್ಲ, ಶಾಲಾ ಕೊಠಡಿಗಳ ದುರಸ್ಥಿಗೆ ಹಣವಿಲ್ಲ, ಪಠ್ಯಪುಸ್ತಕ-ಸಮವಸ್ತ್ರ ನೀಡಲು ಕಾಸಿಲ್ಲ. ಹೊಸ ಕಾಲೇಜುಗಳನ್ನು ಎಲ್ಲೂ ಆರಂಭಿಸಿಲ್ಲ ಎಂದರು.
4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸುವಾಗ, ಅದರಲ್ಲಿ 342 ಕೋಟಿಕೊಟ್ಟರೆ ಸಾಕು. ಇಷ್ಟು ಹಣ ಕೊಡಲಾಗದೇ ಇದ್ದಲ್ಲಿ, ಮತ್ತೇಕೆ ಬಜೆಟ್ ಮಂಡಿಸಬೇಕು? 3 ಸಾವಿರ ಬಾರ್ಗಳನ್ನು ಮುಚ್ಚುವುದಿಲ್ಲ. ಆದರೆ, ವಿಶ್ವವಿದ್ಯಾಲಯಗಳನ್ನು ಮಾತ್ರ ಮುಚ್ಚಲಾಗುತ್ತಿದೆ ಎಂದರು.
ಕರ್ನಾಟಕದಲ್ಲಿ ಪ್ರತಿಭಾವಂತರು ಸಿಗುತ್ತಾರೆ ಎಂಬ ಕಾರಣಕ್ಕೆ ‘ಇನ್ವೆಸ್ಟ್ ಕರ್ನಾಟಕ’ಕ್ಕೆ ಕೈಗಾರಿಕೋದ್ಯಮಿಗಳು ಬರುತ್ತಾರೆ. ವಿದ್ಯಾರ್ಥಿಗಳೇ ಇಲ್ಲವೆಂದ ಮೇಲೆ ಯಾವ ಉದ್ಯಮಿಗಳು ಇಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರುತ್ತಾರೆ ಎಂದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಮೊದಲು ಒತ್ತು ನೀಡಿದ್ದು ಶಿಕ್ಷಣಕ್ಕೆ. ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡುವ ಮೊದಲು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ₹ 4 ಲಕ್ಷ ಕೋಟಿ ಬಜೆಟ್ ಮಂಡಿಸುವ ಸರ್ಕಾರಕ್ಕೆ ₹ 350 ಕೋಟಿ ಅನುದಾನ ನೀಡಲು ಆಗಲ್ಲ. ಕೇಂದ್ರ ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಣಕ್ಕಿಂತ ರಿಯಲ್ ಎಸ್ಟೇಟ್ ಮುಖ್ಯ ಎಂದರು.
ಕೇಂದ್ರ ಸರ್ಕಾರ ಜನ ಔಷಧಿ ಕೇಂದ್ರಗಳನ್ನು ನೀಡಿದರೆ, ಅದನ್ನು ಕೂಡ ಸರ್ಕಾರ ಮುಚ್ಚುತ್ತಿದೆ. ಕೇಂದ್ರ ಸರ್ಕಾರದಿಂದ 40 ಸಾವಿರ ಕಿ.ಮೀ. ರೈಲ್ವೆ ಮಾರ್ಗ ಹೆಚ್ಚಾಗಿದೆ. ರೈಲುಗಳ ಸಂಖ್ಯೆ ಹೆಚ್ಚಿದೆ. ರಾಜ್ಯ ಬಿಜೆಪಿಯಿಂದ ಹತ್ತು ವಿವಿಗಳನ್ನು ರೂಪಿಸಿದಾಗ, ಇನ್ನಷ್ಟು ಹೆಚ್ಚು ವಿವಿಗಳನ್ನು ಮಾಡುತ್ತೇವೆಂದು ಕಾಂಗ್ರೆಸ್ ಹೇಳಬೇಕಿತ್ತು. ಅದನ್ನು ಬಿಟ್ಟು ಬಿಜೆಪಿ ಕಟ್ಟಿದ ಮನೆಯನ್ನು ಒಡೆದು ಹಾಕಲು ಕಾಂಗ್ರೆಸ್ ಮುಂದಾಗಿದೆ. ಶಿಕ್ಷಣ ಹಾಗೂ ಆರೋಗ್ಯ ವಲಯದಲ್ಲಿ ಆದಾಯವನ್ನು ನೋಡಬಾರದು ಎಂದರು.




